- ಗಮನ ಸೆಳೆದ ವಿಜ್ಞಾನ ವಸ್ತು ಪ್ರದರ್ಶನ
ಚಾಮರಾಜನಗರ: ವಿಜ್ಞಾನ ವಸ್ತು ಪ್ರದರ್ಶನದಿಂದ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಯುತ್ತದೆ ಎಂದು ಉದ್ಯಮಿ, ಸಮಾಜಸೇವಕ ಶ್ರೀನಿಧಿಕುದರ್ ಹೇಳಿದರು.
ನಗರದ ಭುವನೇಶ್ವರಿ ವೃತ್ತದ ಸಮೀಪದಲ್ಲಿರುವ ಸಂತ ಜೋಸೆಫರ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಯೋಜಿಸಿದ ವಿಜ್ಞಾನ ವಸ್ತು ಪ್ರದರ್ಶನಕ್ಕೆ ಚಾಲನೆ ನೀಡಿ ಮಾತನಾಡಿದರು.
ಪ್ರಾಥಮಿ ಶಾಲಾ ಹಂತದಲ್ಲಿ ವಿಜ್ಞಾನ ವಸ್ತು ಪ್ರದರ್ಶನ ಅಯೋಜಿಸುವ ಮೂಲಕ ಅವರಲ್ಲಿ ವೈಜ್ಞಾನಿಕ ಮನೋಭಾವನೆ ಮೂಡಿಸುತ್ತಿರುವುದು ತುಂಬಾ ಸಂತಸವಾಗುತ್ತದೆ. ಮುಂದಿನ ಶಿಕ್ಷಣಕ್ಕೆ ಮತ್ತಷ್ಟು ಅನುಕೂಲ ಆಗುತ್ತದೆ . ಮಕ್ಕಳಲ್ಲಿ ಸೃಜನಶೀಲತೆ ಮತ್ತು ಸಂಶೋಧನಾ ಆಸಕ್ತಿಯನ್ನು ಉತ್ತೇಜಿಸುವ ವೇದಿಕೆಯಾಗಿದೆ. ಪ್ರಾಯೋಗಿಕ ಮಾದರಿಗಳ ಮೂಲಕ ಜಟಿಲ ವಿಜ್ಞಾನ ಪರಿಕಲ್ಪನೆಗಳನ್ನು ಸರಳವಾಗಿ ಅರ್ಥಮಾಡಿಕೊಳ್ಳಲು ಮತ್ತು ಪ್ರದರ್ಶಿಸಲು ಇದು ಸಹಾಯ ಮಾಡುತ್ತದೆ, ಜೊತೆಗೆ ಸಮಸ್ಯೆ ಪರಿಹರಿಸುವ ಕೌಶಲ್ಯಗಳನ್ನು ಬೆಳೆಸುತ್ತದೆ ಎಂದರು.
ಮುಖ್ಯ ಶಿಕ್ಷಕಿ ಸಿಸ್ಟರ್ ಆರೋಗ್ಯಮೇರಿ ಮಾತನಾಡಿ, ಪ್ರಾಥಮಿಕ ಹಂತದಲ್ಲಿ ಮಕ್ಕಳಲ್ಲಿ ವಿಜ್ಞಾನದ ಅರಿವು ಮೂಡಿಸುವ ನಿಟ್ಟಿನಲ್ಲಿ ಶಾಲೆ ಮಕ್ಕಳಿಂದ ಮಾದರಿ ಗಳ ತಯಾರಿಸಿ ವಿಜ್ಞಾನ ವಸ್ತು ಪ್ರದರ್ಶನ ಆಯೋಜಿಸಲಾಗಿದೆ ಎಂದರು.
ರಾಕೆಟ್, ಡ್ರೋನ್, ಸ್ಮಾರ್ಟ್ ಸಿಟಿ, ನವೀಕರಿಸಬಹುದಾದ ಇಂಧನ ಯೋಜನೆಗಳು, ಪರಿಸರ ಸಂರಕ್ಷಣೆ ಮತ್ತು ಬಾಹ್ಯಾಕಾಶ ತಂತ್ರಜ್ಞಾನಕ್ಕೆ ಸಂಬಂಧಿಸಿದ ಕಾರ್ಯನಿರತ ಮಾದರಿಗಳನ್ನು ವಿದ್ಯಾರ್ಥಿಗಳು ಪ್ರದರ್ಶಿಸಿ, ಅದರ ಬಗ್ಗೆ ಮಾಹಿತಿ ನೀಡಿದರು.
ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಪ್ರಧಾನ ಸಂಚಾಲಕ ರಾಘವೇಂದ್ರ, ಕಲಾವಿದ ಶಿವಣ್ಣ, ಶಾಲೆ ಯ ಶಿಕ್ಷಕರು ಹಾಜರಿದ್ದರು.