ಚಾಮರಾಜನಗರ: ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭಗೊಂಡಿದ್ದು, ಮೊದಲ ದಿನವಾದ ಇಂದು ಜಿಲ್ಲಾಧಿಕಾರಿ ಶ್ರೀರೂಪ ಅವರು ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
ನಗರದ ಜೆ.ಎಸ್.ಎಸ್. ಮಹಿಳಾ ಪದವಿ ಪೂರ್ವ ಕಾಲೇಜಿನ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಶ್ರೀರೂಪ ಅವರು ಪರೀಕ್ಷೆಗೆ ಹಾಜರಾಗಿರುವ ವಿದ್ಯಾರ್ಥಿಗಳ ಸಂಖ್ಯೆಯ ವಿವರ ಪಡೆದರು. ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷಾ ಕಾರ್ಯಕ್ಕೆ ನಿಯೋಜಿತರಾಗಿರುವ ಸಿಬ್ಬಂದಿಗಳ ಹಾಜರಾತಿಯನ್ನು ಪರಿಶೀಲಿಸಿದರು.
ಪರೀಕ್ಷಾ ಕೇಂದ್ರದಲ್ಲಿ ಕುಡಿಯುವ ನೀರು, ಇನ್ನಿತರ ಮೂಲ ಸೌಲಭ್ಯಗಳನ್ನು ಕಲ್ಪಿಸಿರುವ ಬಗ್ಗೆ ವೀಕ್ಷಿಸಿದರು. ಸಿಸಿ ಕ್ಯಾಮರಾ ಅಳವಡಿಕೆ ಹಾಗೂ ಇದರ ಕಾರ್ಯನಿರ್ವಹಣೆ ಬಗ್ಗೆ ಜಿಲ್ಲಾಧಿಕಾರಿಗಳು ಪರಿಶೀಲನೆ ನಡೆಸಿದರು. ಪರೀಕ್ಷಾ ಕೇಂದ್ರದಲ್ಲಿ ಆರೋಗ್ಯ ಇಲಾಖೆ, ಪೊಲೀಸ್ ಸಿಬ್ಬಂದಿ ನಿಯೋಜನೆ ಬಗ್ಗೆಯೂ ಪರಿಶೀಲಿಸಿ ವಿವರ ಪಡೆದುಕೊಂಡರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಅವರು ಪರೀಕ್ಷಾ ಸಂಬಂಧ ಜಿಲ್ಲಾ ಪಂಚಾಯತ್‍ನಲ್ಲಿ ಸ್ಥಾಪಿಸಿರುವ ವೆಬ್‍ಕಾಸ್ಟಿಂಗ್ ಕಾರ್ಯವೈಖರಿಯನ್ನು ಪರಿಶೀಲಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮುತ್ತುರಾಜು ಅವರು ಸಹ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿದರು.
ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಪುಟ್ಟಗೌರಮ್ಮ, ನಗರದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು, ಜೆ.ಎಸ್.ಎಸ್ ಮಹಿಳಾ ಪದವಿಪೂರ್ವ ಕಾಲೇಜು, ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜು ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
ಮೊದಲ ದಿನವಾದ ಇಂದು ಕನ್ನಡ ವಿಷಯ ಪರೀಕ್ಷೆ ಸುಗಮವಾಗಿ ನಡೆದಿದೆ. ಒಟ್ಟು 6293 ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಾಯಿಸಿದ್ದು, ಇವರಲ್ಲಿ 6173 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. 120 ವಿದ್ಯಾರ್ಥಿಗಳು ಗೈರುಹಾಜರಾಗಿದ್ದಾರೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಪುಟ್ಟಗೌರಮ್ಮ ಅವರು ಮಾಹಿತಿ ನೀಡಿದ್ದಾರೆ.
Like this:
Like Loading...
Related