ಹನೂರು : ತಾಲೂಕಿನ ಶಾಗ್ಯ ಗ್ರಾಮದಲ್ಲಿ ಬೆಳ್ಳಂ ಬೆಳ್ಳಿಗ್ಗೆ ನಡೆದ ಮೂವರು ಬೇಟೆಗಾರರ ಶೂಟೌಟ್ ಘಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಅರಣ್ಯ ಇಲಾಖೆ ವಿರುದ್ಧ ಸ್ಥಳೀಯರು ಹಾಗೂ ಮೃತರ ಸಂಬಂಧಿಕರು ಬೀದಿಗೆಳಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೇಟೆಗಾರರನ್ನು ಜೀವಂತವಾಗಿ ಸೆರೆಹಿಡಿದ ನಂತರ ಅರಣ್ಯ ಸಿಬ್ಬಂದಿ ಹತ್ತಿರದಿಂದ ಗುಂಡಿಟ್ಟು ಹತ್ಯೆ ಮಾಡಿದ್ದಾರೆ ಎಂದು ಮೃತರ ಸಂಬಂಧಿಕರು ಗಂಭೀರ ಆರೋಪ ಮಾಡಿದ್ದಾರೆ. ಸಿಬ್ಬಂದಿ ಘಟನೆಯ ಕುರಿತು ಸುಳ್ಳು ಮಾಹಿತಿ ನೀಡುತ್ತಿದ್ದಾರೆ ಎಂದು ಕಿಡಿಕಾರಿದ ಆಕ್ರೋಶಿತ ಗ್ರಾಮಸ್ಥರು, ಅರಣ್ಯ ಇಲಾಖೆಯ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯ ವೇಳೆ ಶಾಗ್ಯ ಗ್ರಾಮದಲ್ಲಿರುವ ಉಪವಲಯ ಅರಣ್ಯಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಿದ ಗುಂಪು, ಕಚೇರಿಯಲ್ಲಿದ್ದ ಪೀಠೋಪಕರಣಗಳು ಹಾಗೂ ದ್ವಿಚಕ್ರ ವಾಹನಗಳನ್ನು ರಸ್ತೆಗೆ ತಳ್ಳಿ ಧ್ವಂಸಗೊಳಿಸಿ ತಮ್ಮ ಆಕ್ರೋಶ ಹೊರಹಾಕಿತು.
ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಹೆಚ್ಚಿನ ಗಲಭೆ ತಡೆಯಲು ಹಾಗೂ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಹೆಚ್ಚುವರಿ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ. ಕೃತ್ಯ ಎಸಗಿದ ಅರಣ್ಯಾಧಿಕಾರಿಗಳ ವಿರುದ್ಧ ತಕ್ಷಣವೇ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಪಟ್ಟು ಹಿಡಿದಿದ್ದಾರೆ.
