ಚಾಮರಾಜನಗರ: ಎಸ್.ಐ.ಆರ್ ಗೆ ಸಂಬಂಧಿಸಿದಂತೆ ಅಕ್ಟೋಬರ್ 27ರಂದು ಅಂತಿಮ ಮತದಾರರ ಪಟ್ಟಿ ಪ್ರಕಟವಾಗಲಿದ್ದು, ಮತದಾರರ ಪಟ್ಟಿಯಲ್ಲಿ ಕೈಬಿಟ್ಟು ಹೋಗಿರುವ ಮತದಾರರನ್ನು ಗುರುತಿಸಿ ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ವಿಶೇಷ ಆಂದೋಲನ ನಡೆಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಕಚೇರಿಯ ಸಹಾಯಕರಾದ ವೈ.ಎಸ್. ಸುಬ್ರಮಣ್ಯ ಅವರು ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕುರಿತ ಕರಡು ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ನೋಟಿಸ್ ವಿಚಾರಣೆ ಮತ್ತು ಅವುಗಳನ್ನು ಇತ್ಯರ್ಥಪಡಿಸುವ ಸಂಬಂಧ ನೊಂದಾಯಿತ ಮಾನ್ಯತೆ ಪಡೆದ ರಾಷ್ಟ್ರೀಯ ಮತ್ತು ರಾಜ್ಯ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ 7,480 ಮಂದಿಗೆ ನೋಟಿಸ್ ಜಾರಿ ಮಾಡಲಾಗಿದ್ದು, ಈವರೆಗೆ 7051 ಮಂದಿಯ ವಿಚಾರಣೆ ನಡೆಸಲಾಗಿದೆ. ಇನ್ನೂ 429 ನೋಟಿಸ್ ವಿಚಾರಣೆ ಬಾಕಿ ಇದೆ. ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದಲ್ಲಿ ಎಲ್ಲಾ 65 ನೋಟಿಸ್‍ಗಳ ವಿಚಾರಣೆ ಪೂರ್ಣಗೊಂಡಿದೆ. ಹನೂರು ವಿಧಾನಸಭಾ ಕ್ಷೇತ್ರದಲ್ಲಿ 130, ಚಾಮರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ 20 ಹಾಗೂ ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದಲ್ಲಿ 279 ಅರ್ಜಿಗಳ ವಿಚಾರಣೆ ಬಾಕಿ ಇದ್ದು, ವಿಚಾರಣೆ ಪ್ರಕ್ರಿಯೆ ತ್ವರಿತವಾಗಿ ನಡೆಯುತ್ತಿದೆ ಎಂದು ಅವರು ತಿಳಿಸಿದರು.
ಭಾರತ ಚುನಾವಣಾ ಆಯೋಗದ ವೇಳಾಪಟ್ಟಿಯಂತೆ ಅಕ್ಟೋಬರ್ 27ರಂದು ಅಂತಿಮ ಮತದಾರರ ಪಟ್ಟಿ ಪ್ರಕಟವಾಗಲಿದ್ದು, ಮತಗಟ್ಟೆ ಮಟ್ಟದ ಅಧಿಕಾರಿಗಳು (ಬಿಎಲ್.ಒ) ಪ್ರಕಟಿತ ಅಂತಿಮ ಮತದಾರರ ಪಟ್ಟಿಯನ್ನು ಸಮಗ್ರ ಪರಿಷ್ಕರಣೆ ಪೂರ್ವದಲ್ಲಿ ಮತದಾರರ ಪಟ್ಟಿಯೊಡನೆ ತಾಳೆಮಾಡಿ ಪ್ರಕಟಿತ ಅಂತಿಮ ಮತದಾರರ ಪಟ್ಟಿಯಲ್ಲಿ ಕೈಬಿಟ್ಟು ಹೋಗಿರುವ ಮತದಾರರನ್ನು ಗುರುತಿಸಿ, ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಅರ್ಹರಿದ್ದಲ್ಲಿ ಹೆಸರುಗಳನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ವಿಶೇಷ ಆಂದೋಲನ ನಡೆಸಲಾಗುತ್ತದೆ ಎಂದು ಸುಬ್ರಮಣ್ಯ ಅವರು ತಿಳಿಸಿದರು.
ರಾಜಕೀಯ ಪಕ್ಷಗಳ ಪ್ರತಿನಿಧಿಗಳಾದ ಹೆಚ್.ಎಸ್. ತೋಂಟದಾರ್ಯಸ್ವಾಮಿ, ಎಸ್. ಬಾಲಸುಬ್ರಹ್ಮಣ್ಯ, ಎಂ. ಚಿಕ್ಕಮಹದೇವು, ಎಸ್. ರಾಮಚಂದ್ರ, ಚುನಾವಣಾ ಶಿರಸ್ತೇದಾರ್ ನಿತ್ಯಶ್ರಿ, ಇತರರು ಸಭೆಯಲ್ಲಿ ಉಪಸ್ಥಿತರಿದ್ದರು.