ಬಿತ್ತನೆ ಬೀಜ ರಸಗೊಬ್ಬರಗಳಿಗೆ ಕೊರತೆಯಾಗದಂತೆ ನೋಡಿಕೊಳ್ಳಿ : ಸಚಿವ ಕೆ.ವೆಂಕಟೇಶ್ ಸೂಚನೆ

ಚಾಮರಾಜನಗರ: ಜಿಲ್ಲೆಯಲ್ಲಿ ಇತ್ತೀಚೆಗೆ ಉತ್ತಮ ಮಳೆಯಾಗಿದೆ. ಮುಂದಿನ ದಿನಗಳಲ್ಲಿಯೂ ಮಳೆಯಾಗುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ರೈತರಿಗೆ ಅಗತ್ಯವಾದ ಬಿತ್ತನೆ ಬೀಜ, ರಸಗೊಬ್ಬರ ಪೂರೈಕೆಯಲ್ಲಿ ಕೊರತೆಯಾಗದಂತೆ ನೋಡಿಕೊಳ್ಳಬೇಕೆಂದು ಪಶುಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. 

ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ನಡೆದ ತ್ರೈಮಾಸಿಕ ಕೆ.ಡಿ.ಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 

ಕೃಷಿ ಚಟುವಟಿಕೆಗಳಿಗೆ ಅಗತ್ಯವಿರುವ ನೆರವು ಒದಗಿಸಬೇಕು. ಜಿಲ್ಲೆಯಲ್ಲಿ ಬಿತ್ತನೆ ಪ್ರಮಾಣವನ್ನು ಹೆಚ್ಚಿಸಲು ಆಯಾ ಋತುವಿನಲ್ಲಿ ಬೆಳೆಯುವ ಬೆಳೆಗಳ ಬಗ್ಗೆ ರೈತರಿಗೆ ಅರಿವು ಮೂಡಿಸಬೇಕು. ಜಿಲ್ಲಾ ಹಾಗೂ ತಾಲೂಕುಮಟ್ಟದ ಅಧಿಕಾರಿಗಳು ಎಲ್ಲಾ ತಾಲೂಕುಗಳಲ್ಲಿ ಕ್ಷೇತ್ರಪ್ರವಾಸ ಮಾಡಿ ಈ ಬಗ್ಗೆ ಭಾವಚಿತ್ರದ ಸಮೇತ ದಾಖಲು ಮಾಡಬೇಕು ಎಂದರು. 

ಜಿಲ್ಲೆಯಲ್ಲಿ ಈ ಬಾರಿ ಮಳೆ-ಗಾಳಿಯಿಂದ 1110 ಎಕರೆ ಬಾಳೆಬೆಳೆ ನಷ್ಟವಾಗಿದ್ದು, ಈ ಬಗ್ಗೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ರೈತರಿಗೆ ನಷ್ಟದ ಪರಿಹಾರವನ್ನು ಶೀಘ್ರವಾಗಿ ಒದಗಿಸಬೇಕು. ಬಾಳೆ ಬೆಳೆಯನ್ನು ಬೆಳೆ ವಿಮೆ ವ್ಯಾಪ್ತಿಗೆ ಸೇರಿಸಲು ಅಗತ್ಯ ಕ್ರಮ ವಹಿಸುವಂತೆ ಸಚಿವರು ಅಧಿಕಾರಿಗಳಿಗೆ ತಿಳಿಸಿದರು. 

ಜಿಲ್ಲೆಯ ಕಾಡಂಚಿನಲ್ಲಿರುವ ಹಾಡಿಗಳಿಗೆ ಜಲಜೀವನ್ ಮಿಷನ್ ಯೋಜನೆಯಡಿ ಕುಡಿಯುವ ನೀರಿನ ಪೈಪ್ ಲೈನ್ ಅಳವಡಿಸುವ ಕಾಮಗಾರಿಗೆ ಅರಣ್ಯ ಇಲಾಖೆ ಅಡ್ಡಿಪಡಿಸಬಾರದು. ಅರಣ್ಯವಾಸಿಗಳಿಗೆ ಕುಡಿಯುವ ನೀರು, ರಸ್ತೆ, ವಿದ್ಯುತ್ ವ್ಯವಸ್ಥೆ, ಸೇರಿದಂತೆ ಇತರೆ ಮೂಲಸೌಲಭ್ಯಗಳನ್ನು ಕಲ್ಪಿಸಲು ಅರಣ್ಯ ಇಲಾಖೆ ಸಹಕಾರ ನೀಡಬೇಕೆ ಹೊರತು ತೊಂದರೆ ಕೊಡಬಾರದು. ಅಲ್ಲದೆ ಜಿಲ್ಲೆಯ ಯಾವುದೇ ಭಾಗದಲ್ಲಿ ಕುಡಿಯುವ ನೀರಿನ ಪೈಪ್‍ಲೈನ್ ಸೋರಿಕೆಯಾಗಿ ನೀರು ಕಲುಷಿತಗೊಳ್ಳದಂತೆ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕು ಎಂದರು.   

ಸಂತೇಮರಹಳ್ಳಿ, ಯಳಂದೂರು ಕೊಳ್ಳೇಗಾಲ ಹಾಗೂ ಮಾಂಬಳ್ಳಿ ಭಾಗದಲ್ಲಿರುವ ರೇಷ್ಮೆ ತರಬೇತಿ ಕೇಂದ್ರಗಳನ್ನು ಬದಲಾಗಿರುವ ತಾಂತ್ರಿಕತೆಗೆ ಅನುಗುಣವಾಗಿ ಪುನಶ್ಚೇತನಗೊಳಿಸಲು ಏನೇನು ಕ್ರಮಗಳನ್ನು ಮಾಡಬೇಕಿದೆ ಎಂಬುದರ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದ ಸಚಿವರು ರೇಷ್ಮೆ ಬೆಳೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಕ್ರಮವಹಿಸಬೇಕು. ರೇಷ್ಮೆ ಮತ್ತು ತೆಂಗು ಬೆಳೆಗಳು ಜನರಿಗೆ ಆದಾಯ ತರುವುದರಿಂದ ಜಿಲ್ಲೆಯಲ್ಲಿ ರೇಷ್ಮೆ ಬೆಳೆಗಾರರನ್ನು ಪ್ರೇರೆಪಿಸಬೇಕಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಅವರು ತಿಳಿಸಿದರು. 

ಸಮಾಜ ಕಲ್ಯಾಣ ಸಚಿವರು ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಚ್.ಸಿ. ಮಹದೇವಪ್ಪ ಅವರು ಮಾತನಾಡಿ ಚಾಮರಾಜನಗರ ರೈತರ ಜಿಲ್ಲೆಯಾಗಿದ್ದು, ಹೆಚ್ಚಾಗಿ ಮಳೆಯನ್ನೆ ಆಶ್ರಯಿಸಿದ್ದಾರೆ. ಜಿಲ್ಲೆಯಲ್ಲಿ ಸಾಕಷ್ಟು ಮಂದಿ ಪರಿಶಿಷ್ಟ ಜಾತಿ, ಪಂಗಡಗಳ ರೈತರು ಸಾಗುವಳಿ ಭೂಮಿ ಹೊಂದಿದ್ದಾರೆ. ಹಲವರಿಗೆ ಖಾತೆ ವಿಳಂಬದಿಂದ ಸರ್ಕಾರದ ಸೌಲಭ್ಯಗಳು ಲಭ್ಯವಾಗುತ್ತಿಲ್ಲ. ಖಾತೆಯಾಗದ ಹಿನ್ನೆಲೆಯಲ್ಲಿ ಫಸಲ್ ಬಿಮಾ ಯೋಜನೆಯಿಂದ ಇವರಿಗೆ ಯಾವುದೇ ಅನುಕೂಲವಾಗುತ್ತಿಲ್ಲ. ಈ ನಿಟ್ಟಿನಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ರೈತರಿಗೆ ಖಾತೆ ಮಾಡಿಕೊಡಲು ಸಂಬಂಧಪಟ್ಟ ಗ್ರಾಮ ಲೆಕ್ಕಾಧಿಕಾರಿಗಳಿಗೆ ಗುರಿ ನಿಗದಿಪಡಿಸುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಇದೇ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಜಿಲ್ಲೆಯಲ್ಲಿ ಖಾತೆ ಆಂದೋಲನ ಹಮ್ಮಿಕೊಳ್ಳಲಾಗುತ್ತಿದೆ. ಆಂದೋಲನವನ್ನು ಪರಿಣಾಮಕಾರಿಯಾಗಿಸಲು ಅರಣ್ಯ ಸೇರಿದಂತೆ ಇತರೆ ಇಲಾಖೆಯೊಂದಿಗೆ ಸಮನ್ವಯ ಸಾಧಿಸಿ ಗ್ರಾಮ ಲೆಕ್ಕಧಿಕಾರಿಗಳಿಗೆ ಮಾಹೆವಾರು ಗುರಿ ನಿಗದಿ ಮಾಡಲಾಗುತ್ತದೆ ಎಂದು ಸಭೆಗೆ ತಿಳಿಸಿದರು. 

ಬಳಿಕ ಮಾತನಾಡಿದ ಸಮಾಜ ಕಲ್ಯಾಣ ಸಚಿವರು ಕಾಡಂಚಿನ ಗ್ರಾಮಗಳಲ್ಲಿ ಆರೋಗ್ಯ ಶಿಬಿರಗಳನ್ನು ಏರ್ಪಡಿಸಿ ಆದಿವಾಸಿಗಳ ಆರೋಗ್ಯ ರಕ್ಷಣೆಗೆ ಮುಂದಾಗಬೇಕು. ಜನರಿಗೆ ಸಕಾಲದಲ್ಲಿ ಉತ್ತಮ ಆರೋಗ್ಯ ಸೌಲಭ್ಯಗಳನ್ನು ಒದಗಿಸಲು ಎಲ್ಲಾ ಪ್ರಾಥಮಿಕ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳನ್ನು ಉನ್ನತೀಕರಣಗೊಳಿಸಬೇಕು. ಇತ್ತೀಚೆಗೆ ಜಿಲ್ಲೆಯಲ್ಲಿ ಡೆಂಗೀ ಉಲ್ಬಣಗೊಳ್ಳುತ್ತಿದೆ. ಮಹಿಳೆಯರು ಅನೀಮಿಯಾ (ರಕ್ತಹೀನತೆ)ದಿಂದ ಬಳಲುತ್ತಿದ್ದಾರೆ. ಈ ಎಲ್ಲಾ ಸಮಸ್ಯೆಗಳ ನಿವಾರಣೆಗಾಗಿ ಜಿಲ್ಲೆಯ ಆರೋಗ್ಯ ಕೇಂದ್ರಗಳಲ್ಲಿ ಕೊರತೆಯಾಗಿರುವ ಸಿಬ್ಬಂದಿ ನೇಮಕಕ್ಕೆ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.  

ಸಮಾಜ ಕಲ್ಯಾಣ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗಳ ವ್ಯಾಪ್ತಿಯಲ್ಲಿ ಬರುವ ವಸತಿ ಶಾಲೆಗಳು ಹಾಗೂ ವಿದ್ಯಾರ್ಥಿನಿಲಯಗಳಲ್ಲಿ ಗುಣಮಟ್ಟದ ಶಿಕ್ಷಣ, ಪೌಷ್ಠಿಕ ಆಹಾರ ನೀಡಿ ಮಕ್ಕಳ ಕಲಿಕಾ ಪ್ರಕ್ರಿಯೆಯನ್ನು ವೃದ್ದಿಗೊಳಿಸಬೇಕು ಸಚಿವರಾದ ಡಾ. ಮಹದೇವಪ್ಪ ಅವರು ತಿಳಿಸಿದರು.     

ಸಭೆಯಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲಿಸಲಾಯಿತು. 

ಶಾಸಕರಾದ ಸಿ. ಪುಟ್ಟರಂಗಶೆಟ್ಟಿ, ಎ.ಆರ್. ಕೃಷ್ಣಮೂರ್ತಿ, ಎಂ.ಆರ್. ಮಂಜುನಾಥ್, ಎಚ್.ಎಂ. ಗಣೇಶ್ ಪ್ರಸಾದ್, ರಾಜ್ಯ ಉಗ್ರಾಣ ನಿಗಮದ ಆಧ್ಯಕ್ಷರಾದ ಎಸ್. ಜಯಣ್ಣ, ವಿಧಾನಪರಿಷತ್ ಸದಸ್ಯರಾದ ಡಿ. ತಿಮ್ಮಯ್ಯ, ಪಂಚ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷರಾದ ಎಚ್.ವಿ. ಚಂದ್ರು ಅವರು ಮಾತನಾಡಿ ಜಿಲ್ಲೆಯ ಅಭಿವೃದ್ಧಿಗೆ ಪೂರಕವಾದ ಬೇಡಿಕೆಗಳನ್ನು ಸಚಿವರಲ್ಲಿ ಮಂಡಿಸಿದರು. 

ವಿಧಾನಪರಿಷತ್ ಸದಸ್ಯರಾದ ಸಿ.ಎನ್. ಮಂಜೇಗೌಡ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು, ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ. ಸಂತೋಷ್‍ಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಪಿ. ಲಕ್ಷ್ಮೀ, ಇತರರು ಸಭೆಯಲ್ಲಿ ಉಪಸ್ಥಿತರಿದ್ದರು.

ಸಭೆಯ ಆರಂಭದಲ್ಲಿ ಗ್ರಾಮೀಣ ಕೈಗಾರಿಕೆ ಇಲಾಖೆ ವತಿಯಿಂದ ಫಲಾನುಭವಿಗಳಿಗೆ ಸಾಂಕೇತಿಕವಾಗಿ ಹೊಲಿಗೆಯಂತ್ರ ವಿತರಿಸಲಾಯಿತು.

Leave a Reply

Your email address will not be published. Required fields are marked *