ಚಾಮರಾಜನಗರ: ಆರೋಗ್ಯಕರ ಬದುಕಿಗೆ ಕ್ರೀಡಾ ಚಟುವಟಿಕೆಗಳು ಬಹು ಮುಖ್ಯವಾಗಿದೆ ಎಂದು ಪಶು ಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಅವರು ತಿಳಿಸಿದರು.
ನಗರದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿಂದು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ಮರಿಯಾಲದ ಶ್ರೀ ಮುರುಘರಾಜೇಂದ್ರಸ್ವಾಮಿ ಸಂಯುಕ್ತ ಪದವಿ ಪೂರ್ವ ಕಾಲೇಜು ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಚಾಮರಾಜನಗರ ತಾಲೂಕು ಮಟ್ಟದ ಶಾಲಾ ಶಿಕ್ಷಣ (ಪದವಿ ಪೂರ್ವ) ಕಾಲೇಜುಗಳ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.
ಜೀವನದಲ್ಲಿ ಎಷ್ಟೇ ಚಟುವಟಿಕೆಗಳಿದ್ದರು ಕ್ರೀಡಾ ಚಟುವಟಿಕೆ ಅತ್ಯಂತ ಅವಶ್ಯವಾಗಿದೆ. ಆರೋಗ್ಯ ಜೀವನಕ್ಕೆ ಕ್ರೀಡೆ ಸಹಕಾರಿಯಾಗಲಿದೆ. ದೈಹಿಕವಾಗಿ ಸಧೃಡರಾಗಲು ಕ್ರೀಡೆ ಆಟೋಟಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಸಚಿವರು ಸಲಹೆ ಮಾಡಿದರು.
ಕ್ರೀಡಾ ಆಸಕ್ತರಿಗೆ ಉತ್ತೇಜನ ನೀಡುವ ಸಲುವಾಗಿ ಇನ್ನಷ್ಟು ಕ್ರೀಡಾ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ. 13 ಕೋಟಿ ರೂ. ವೆಚ್ಚದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣ ಅಭಿವೃದ್ದಿ ಹಾಗೂ ಈಜುಕೊಳ ನಿರ್ಮಾಣ ಕಾಮಗಾರಿ ಪ್ರಾರಂಭವಾಗಿದೆ. ಲೋಕಸಭಾ ಸದಸ್ಯರಾಗಿದ್ದ ಧ್ರುವನಾರಾಯಣ್ ಅವರ ಅವಧಿಯಲ್ಲಿ ಸುಸಜ್ಜಿತ ಸಿಂಥೆಟಿಕ್ ಟ್ರ್ಯಾಕ್ ನಿರ್ಮಾಣವಾಯಿತು. ಕ್ರೀಡಾ ಚಟುವಟಿಕೆಗಳಿಗೆ ಈ ಮೂಲಕ ಉತ್ತೇಜನ ನೀಡಲಾಗುತ್ತಿದೆ ಎಂದರು.
ಪ್ರಸ್ತುತ ನಡೆಯುತ್ತಿರುವ ತಾಲೂಕು ಮಟ್ಟದ ಕ್ರೀಡಾ ಕೂಟದಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಸಾಧನೆ ಮಾಡಬೇಕು. ರಾಜ್ಯ, ರಾಷ್ಟ್ರ ಮಟ್ಟದಲ್ಲಿಯೂ ಆಯ್ಕೆಯಾಗಿ ಜಿಲ್ಲೆಗೆ ಕೀರ್ತಿ ತರಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಅವರು ಹಾರೈಸಿದರು.
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷರಾದ ಹೆಚ್.ವಿ. ಚಂದ್ರು ಅವರು ಮಾತನಾಡಿ ವಿದ್ಯಾರ್ಥಿಗಳಲ್ಲಿರುವ ಸುಪ್ತ ಪ್ರತಿಭೆಯನ್ನು ಗುರುತಿಸಿ ಅವಕಾಶ ಮಾಡಿಕೊಡಲು ಪ್ರೋತ್ಸಾಹ ನೀಡಬೇಕು. ಕ್ರೀಡಾ ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳು ಸೋಲಿಗೆ ಧೃತಿಗೆಡಬಾರದು ಗೆಲುವು ಸೋಲನ್ನು ಸಮಾನವಾಗಿ ಸ್ವೀಕರಿಸಬೇಕು ಎಂದರು.
ಮರಿಯಾಲದ ಶ್ರೀ ಮುರುಘರಾಜೇಂದ್ರಸ್ವಾಮಿ ಮಹಾಸಂಸ್ಥಾನ ಮಠಾಧ್ಯಕ್ಷರು ಹಾಗೂ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಇಮ್ಮಡಿ ಮುರುಘರಾಜೇಂದ್ರಸ್ವಾಮಿ ಅವರು ಮಾತನಾಡಿ ವಿದ್ಯಾರ್ಥಿಗಳ ಮಾನಸಿಕ ಹಾಗೂ ದೈಹಿಕ ಆರೋಗ್ಯ ಕಾಪಾಡಿಕೊಳ್ಳಲು ಕ್ರೀಡೆಯಿಂದ ಸಾಧ್ಯವಾಗಲಿದೆ. ಧ್ಯಾನ, ಯೋಗದಂತಹ ಆಧ್ಯಾತ್ಮಿಕ ಶಿಕ್ಷಣವು ಅಗತ್ಯವಾಗಿದೆ. ವಿದ್ಯಾರ್ಥಿಗಳಿಗೆ ಕ್ರೀಡಾಕೂಟ ಸಹಕಾರಿಯಾಗಲಿದೆ ಎಂದು ತಿಳಿಸಿದರು.
ಚೂಡಾ ಅಧ್ಯಕ್ಷರಾದ ಮಹಮ್ಮದ್ ಅಸ್ಗರ್ ಮುನ್ನಾ, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಹೆಚ್.ಎನ್. ಪುಟ್ಟಗೌರಮ್ಮ, ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ಅಧ್ಯಕ್ಷರಾದ ಪಿ. ಪ್ರಿಯಾ ಶಂಕರ್, ಖಜಾಂಚಿ ಹೆಚ್.ಎನ್ ಸ್ವಾಮಿ, ಮುರುಘರಾಜೇಂದ್ರಸ್ವಾಮಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪಿ. ಮಹದೇವಸ್ವಾಮಿ, ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಅಧ್ಯಕ್ಷರಾದ ಟಿ. ಮಧು, ಜಿಲ್ಲಾ ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷರಾದ ನಾಗರಾಜು, ತಾಲೂಕು ದೈಹಿಕ ಶಿಕ್ಷಿಣ ಪರಿವೀಕ್ಷಕರಾದ ಬಸವರಾಜು, ದೈಹಿಕ ಶಿಕ್ಷಣ ಶಿಕ್ಷಕರಾದ ಚಿಕ್ಕಬಸವಯ್ಯ, ವಿಶ್ರಾಂತ ಪ್ರಾಂಶುಪಾಲರಾದ ಸೋಮಣ್ಣ, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.