ಎಸ್.ಎಸ್.ಎಲ್.ಸಿ, ಪಿಯುಸಿ ಪರೀಕ್ಷೆ : ಪಾರದರ್ಶಕವಾಗಿ ನಡೆಸಲು ಅಗತ್ಯ ಸಿದ್ದತೆ ಕೈಗೊಳ್ಳಿ-ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಸೂಚನೆ

ಚಾಮರಾಜನಗರ: ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿ.ಯು.ಸಿ ಪರೀಕ್ಷೆಗಳನ್ನು ಸುಗಮ ಹಾಗೂ ಪಾರದರ್ಶಕವಾಗಿ ನಡೆಸಲು ಅಗತ್ಯವಿರುವ ಸಕಲ ಸಿದ್ದತೆ ಮಾಡುವಂತೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಸೂಚಿಸಿದರು.

ನಗರದ ವೀಡಿಯೋ ಕಾನ್ಫರೆನ್ಸ್ ಸಭಾಂಗಣದಲ್ಲಿ ಇಂದು 2024ರ ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿ.ಯು.ಸಿ ಪರೀಕ್ಷೆ ಸಂಬಂಧ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ದ್ವಿತೀಯ ಪಿಯುಸಿ ಪರೀಕ್ಷೆ ಮಾರ್ಚ್ 1 ರಿಂದ 22ರವರೆಗೆ ಹಾಗೂ ಎಸ್.ಎಸ್.ಎಲ್.ಸಿ ಪರೀಕ್ಷೆ ಮಾರ್ಚ್ 25 ರಿಂದ ಏಪ್ರಿಲ್ 6ರವರೆಗೆ ನಿಗದಿಯಾಗಿದೆ. ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗೆ 7328 ಅಭ್ಯರ್ಥಿಗಳು ಹಾಗೂ ಎಸ್.ಎಸ್.ಎಲ್.ಸಿ ಪರೀಕ್ಷೆಗೆ 12403 ಅಭ್ಯರ್ಥಿಗಳು ನೋಂದಣಿಯಾಗಿದ್ದಾರೆ. 17 ಪಿಯುಸಿ ಪರೀಕ್ಷಾ ಕೇಂದ್ರಗಳು ಮತ್ತು 45 ಎಸ್.ಎಸ್.ಎಲ್.ಸಿ ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗುತ್ತಿದೆ ಎಂದರು.

ಪರೀಕ್ಷಾ ಕೇಂದ್ರದ ಕೊಠಡಿಗಳಲ್ಲಿ ಹಾಗೂ ಹೊರಾಂಗಣದಲ್ಲಿ ಅಳವಡಿಸಿರುವ ಸಿ.ಸಿ ಕ್ಯಾಮರಾಗಳು ಕಾರ್ಯ ನಿರ್ವಹಣಾ ಸ್ಥಿಯಲ್ಲಿರುವುದನ್ನು ಪರಿಶೀಲಿಸಿ ಖಾತರಿ ಪಡಿಸಿಕೊಳ್ಳಬೇಕು. ದುರಸ್ಥಿ ಯಾಗಬೇಕಿದ್ದಲ್ಲಿ ಸಂಚಿತ ಅನುದಾನ ಬಳಸಿ ಕ್ರಮ ವಹಿಸಬೇಕು. ಪರೀಕ್ಷಾ ದಿನಗಳಂದು ಪರೀಕ್ಷಾ ಕೇಂದ್ರದ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿμÉೀದಾಜ್ಞೆಯನ್ನು ಜಾರಿಗೊಳಿಸಲಾಗುವುದು. ಪರೀಕ್ಷಾ ಕೇಂದ್ರದ 500 ಮೀಟರ್ ವ್ಯಾಪ್ತಿಯ ಜೆರಾಕ್ಸ್ ಮತ್ತು ಸೈಬರ್ ಸೆಂಟರ್‍ಗಳನ್ನು ಪರೀಕ್ಷಾ ಅವಧಿಯಲ್ಲಿ ಮುಚ್ಚಿಸಲಾಗುವುದು ಎಂದು ಜಿಲ್ಲಾಧಿಕಾರಿಯವರು ತಿಳಿಸಿದರು.

ಪರೀಕ್ಷಾ ಕೇಂದ್ರದಲ್ಲಿ ಪೀಠೋಪಕರಣ, ಕುಡಿಯುವ ನೀರು, ಶೌಚಾಲಯ ಹಾಗೂ ಗಾಳಿ ಬೆಳಕು ಇನ್ನಿತರ ಎಲ್ಲಾ ಮೂಲ ಸೌಕರ್ಯಗಳು ಉತ್ತಮ ಸ್ಥಿತಿಯಲ್ಲಿ ಇರಬೇಕು. ಪರೀಕ್ಷಾ ಕೇಂದ್ರದ ಕೊಠಡಿಗಳ ವಿವರಗಳ ಮಾರ್ಗ ನಕ್ಷೆಯನ್ನು ಸೂಚನಾ ಫಲಕದಲ್ಲಿ ಪ್ರಕಟಿಸಬೇಕು. ಪರೀಕ್ಷಾ ಕೊಠಡಿಯ ಮೇಲ್ವಿಚಾರಕರಾಗಿ ಸರ್ಕಾರಿ, ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರನ್ನು ನೇಮಕ ಮಾಡಬೇಕು. ಪರೀಕ್ಷಾ ಕಾರ್ಯ ನಿರತ ಎಲ್ಲಾ ಅಧಿಕಾರಿ ಸಿಬ್ಬಂದಿಯು ಮಂಡಲಿ ನೀಡುವ ಗುರುತಿನ ಚೀಟಿ ಅಥವಾ ಇಲಾಖೆ ಕಚೇರಿಯಿಂದ ಪಡೆದ ಗುರುತಿನ ಚೀಟಿಯನ್ನು ಧರಿಸಿ ಪರೀಕ್ಷಾ ಕಾರ್ಯನಿರ್ವಹಿಸಬೇಕು ಎಂದರು.

ಪರೀಕ್ಷಾ ದಿನಗಳಂದು ವಿದ್ಯುತ್ ಸಂಪರ್ಕ ಕಡಿತಗೊಳಿಸದಿರುವ ಬಗ್ಗೆ ಚೆಸ್ಕಾಂ ಅಧಿಕಾರಿಗಳಿಗೆ ಪತ್ರ ಬರೆಯಬೇಕು. ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ ಔಷಧಿ, ಪ್ರಥಮ ಚಿಕಿತ್ಸಾ ಪೆಟ್ಟಿಗೆ ಸಹಿತವಾಗಿ ಶುಶ್ರೂಷಕಿ, ಆಶಾ ಕಾರ್ಯಕರ್ತೆಯರನ್ನು ನಿಯೋಜಿಸಬೇಕು ಎಂದು ಜಿಲ್ಲಾಧಿಕಾರಿಯವರು ಸೂಚಿಸಿದರು.

ಪರೀಕ್ಷಾ ಕೇಂದ್ರಕ್ಕೆ ಸಕಾಲದಲ್ಲಿ ಹಾಜರಾಗಲು ವಿದ್ಯಾರ್ಥಿಗಳಿಗೆ ಇರುವ ಸಾರಿಗೆ ವ್ಯವಸ್ಥೆಯನ್ನು ಪರಿಶೀಲಿಸಿ ಪ್ರಾಂಶುಪಾಲರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ವರದಿ ನೀಡಬೇಕಿದೆ. ಪರೀಕ್ಷಾ ದಿನದಂದು ಪ್ರವೇಶ ಪತ್ರವನ್ನು ಹಾಜರು ಪಡಿಸಿ ವಿದ್ಯಾರ್ಥಿಗಳು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವಾಹನಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅಗತ್ಯ ಕ್ರಮವಹಿಸಲಾಗುವುದು ಎಂದರು.

ಜಿಲ್ಲೆಯ ಯಾವುದೇ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷಾ ಅವ್ಯವಹಾರ ಪ್ರಕರಣಗಳು ಉಂಟಾಗದಂತೆ ಕಟ್ಟುನಿಟ್ಟಾಗಿ ನಿಗಾವಹಿಸಿ. ಪರೀಕ್ಷೆಗೆ ಸಂಬಂಧಿಸಿದ ಸುಳ್ಳು ಸುದ್ದಿ ಹಾಗೂ ವದಂತಿಗಳಿಗೆ ಅವಕಾಶ ನೀಡದಿರಿ. ಅಂತಹ ಪ್ರಕರಣಗಳು ಕಂಡು ಬಂದಲ್ಲಿ ಸಂಬಂಧಿಸಿದವರ ವಿರುದ್ಧ ಕಾನೂನು ರೀತ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ತಿಳಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ವರಿμÁ್ಠಧಿಕಾರಿ ಪದ್ಮಿನಿ ಸಾಹು, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಮಂಜುನಾಥ ಪ್ರಸನ್ನ, ಶಾಲಾ ಶಿಕ್ಷÀಣ ಇಲಾಖೆಯ ಉಪನಿರ್ದೇಶಕರಾದ ರಾಮಚಂದ್ರರಾಜೇಅರಸ್, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಉಪನಿರ್ದೇಶಕರಾದ ಕಾಶಿನಾಥ್, ಜಿಲ್ಲಾ ಖಜಾನಾಧಿಕಾರಿ ಸುಲೋಚನಾ, ಜಿಲ್ಲೆಯ ಎಲ್ಲಾ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಪರೀಕ್ಷಾ ನೋಡಲ್ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *