ವಿದ್ಯಾರ್ಥಿಗಳು ಕ್ರೀಡೆಯನ್ನು ದಿನನಿತ್ಯದ ಚಟುವಟಿಕೆಯಾಗಿ ಪರಿಗಣಿಸಿ : ಮಹಮದ್ ಅಸ್ಗರ್ ಮುನ್ನಾ

ಚಾಮರಾಜನಗರ: ಕ್ರೀಡೆಯನ್ನು ದಿನನಿತ್ಯದ ಚಟುವಟಿಕೆಯ ಭಾಗವಾಗಿ ಪರಿಗಣಿಸಿ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಪಾಲ್ಗೊಂಡು ಜಿಲ್ಲೆಗೆ ಕೀರ್ತಿ ತರುವಂತೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಹಮದ್ ಅಸ್ಗರ್ ಮುನ್ನಾ ಅವರು ವಿದ್ಯಾರ್ಥಿಗಳಿಗೆ ಸಲಹೆ ಮಾಡಿದರು.

  ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮೈದಾನದಲ್ಲಿಂದು ಯುವ ವ್ಯವಹಾರಗಳು ಹಾಗೂ ಕ್ರೀಡಾ ಸಚಿವಾಲಯ, ಮೈ ಭಾರತ್ ಕೇಂದ್ರ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾಮಟ್ಟದ ಕ್ರೀಡಾಕೂಟ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. 

ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು. ಕ್ರೀಡೆಯಲ್ಲಿ ಭಾಗವಹಿಸುವ ಪ್ರತಿಯೊಬ್ಬ ವಿದ್ಯಾರ್ಥಿಯು ಕ್ರೀಡಾ ಮನೋಭಾವ ಮೆರೆಯಬೇಕು. ಇತರೆ ಕ್ರೀಡಾಪಟುಗಳಿಗೂ ಮಾದರಿಯಾಗಬೇಕು. ವಿದ್ಯಾರ್ಥಿಗಳು ಕ್ರೀಡೆಗಳಲ್ಲಿ ಭಾಗಿಯಾದರೆ ಮುಂದಿನ ದಿನಗಳಲ್ಲಿ ಹೆಚ್ಚಿನ ಅವಕಾಶಗಳು ಒದಗಿ ಬರಲಿವೆ. ಕ್ರೀಡಾಕೂಟದಲ್ಲಿ ತೀರ್ಪುಗಾರರು ನ್ಯಾಯಬದ್ಧ ಹಾಗೂ ನಿಷ್ಪಕ್ಷಪಾತವಾಗಿ ತೀರ್ಪು ನೀಡಬೇಕು ಎಂದು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಹಮದ್ ಅಸ್ಗರ್ ಮುನ್ನಾ ಅವರು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಆರ್.ಎಸ್. ಅಶ್ವಿನಿ ಅವರು ಮಾತನಾಡಿ ಯುವಕರಲ್ಲಿ ದೇಹ, ಮನಸ್ಸು ಸದೃಢಗೊಳ್ಳಲು ಕ್ರೀಡೆ ಅತ್ಯಾವಶ್ಯಕವಾಗಿದೆ. ವಿದ್ಯಾರ್ಥಿಗಳ ದೈಹಿಕ, ಮಾನಸಿಕ ಬೆಳವಣಿಗೆಗೆ ಕ್ರೀಡೆ ಒಂದು ಉತ್ತಮ ವೇದಿಕೆಯಾಗಲಿದೆ. ಎಲ್ಲಾ ಜಿಲ್ಲೆಗಳಲ್ಲಿ ಪ್ರತಿಭಾವಂತ ಗ್ರಾಮೀಣ ಕ್ರೀಡಾಪಟುಗಳನ್ನು ಹೊರತರಲು ಭಾರತ ಸರ್ಕಾರ ಈ ಕಾರ್ಯಕ್ರಮ ರೂಪುಗೊಳಿಸಿದೆ. ಗ್ರಾಮೀಣ ಪ್ರತಿಭೆಗಳು ರಾಷ್ಟ್ರಮಟ್ಟದಲ್ಲಿ ಇನ್ನಷ್ಟು ಬೆಳೆಯಬೇಕು. ಮಹಿಳೆಯರಿಗೆ ಹೆಚ್ಚಿನ ಅವಕಾಶಗಳು ಸಿಗಬೇಕು ಎಂದರು. 

  ಕುದೇರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಎನ್.ವಿ. ಸಿಂಧು ಅವರು ಮಾತನಾಡಿ ಕ್ರೀಡೆ ಯಾರೋ ಒಬ್ಬರಿಗೆ ಮೀಸಲಾಗಿಲ್ಲ. ಎಲ್ಲರು ಪಾಲ್ಗೊಳ್ಳಬೇಕು. ಪ್ರತಿಯೊಬ್ಬರ ಶಾರೀರಿಕ ಸುಸ್ಥಿತಿಗೆ ಕ್ರೀಡೆ ಅವಶ್ಯವಾಗಿದೆ. ಪ್ರತಿಯೊಬ್ಬರ ಜೀವನ ಶೈಲಿಯಲ್ಲಿ ಕ್ರೀಡೆ ಬಹುಮುಖ್ಯವಾದ ಪಾತ್ರವನ್ನು ವಹಿಸುತ್ತದೆ. ದೈನಂದಿನ ಮಾನಸಿಕ ಉಲ್ಲಾಸಕ್ಕೆ ಕ್ರೀಡೆ ಹೆಚ್ಚಿನ ಸಹಕಾರಿಯಾಗಿದೆ ಎಂದರು.

  ನಗರದ ಜೈ ಭುವನೇಶ್ವರಿ ಕನ್ನಡ ಯುವ ವೇದಿಕೆ ಅಧ್ಯಕ್ಷರಾದ ಜಿ. ಬಂಗಾರು ಅವರು ಮಾತನಾಡಿ ಯುವಕ, ಯುವತಿಯರನ್ನು ಪ್ರೋತ್ಸಾಹಿಸುವ ಸಲುವಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕ್ರೀಡೆಯಲ್ಲಿ ಪಾಲ್ಗೊಳ್ಳಲು ಪ್ರೇರೇಪಿಸುತ್ತಿವೆ. ರಾಜ್ಯ ಹಾಗೂ ರಾಷ್ಟ್ರಮಟ್ಟದ ಕ್ರೀಡಾಕೂಟಗಳಲ್ಲಿ ಇತ್ತೀಚೆಗೆ ಪುರುಷರಂತೆ ಮಹಿಳಾ ಕ್ರೀಡಾಪಟುಗಳು ಉತ್ತಮ ಸಾಧನೆ ಮಾಡುತ್ತಿದ್ದಾರೆ. ಇದು ಆರೋಗ್ಯಕರ ಬೆಳವಣಿಗೆಯಾಗಿದೆ ಎಂದು ಹೇಳಿದರು. 

  ಮೈ ಭಾರತ್ ಕೇಂದ್ರದ ಸಹನಾ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕ್ರೀಡಾ ಸಂಚಾಲಕರಾದ ದೀಪಿಕಾ, ದೈಹಿಕ ಶಿಕ್ಷಣ ನಿರ್ದೇಶಕರಾದ ಮಹಾದೇವ್, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *