- ಹರದನಹಳ್ಳಿ ಹೋಬಳಿ ಮಟ್ಟದ ಹಿರಿಯ ಪ್ರಾಥಮಿಕ/ಪ್ರೌಢಶಾಲಾ ಕ್ರೀಡಾಕೂಟ ಚಾಲನೆ
ಚಾಮರಾಜನಗರ: ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಕ್ರೀಡೆಗೂ ಒತ್ತು ನೀಡಬೇಕು ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ.ವೃಷಬೇಂದ್ರಪ್ಪ ಸಲಹೆ ನೀಡಿದರು.
ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿ.ಪಂ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಶಾಲಾ ಶಿಕ್ಷಣ ಇಲಾಖೆ ವತಿಯಿಂದ 14 ವರ್ಷ ವಯೋಮಿತಿಯ ಬಾಲಕ, ಬಾಲಕಿಯರ ಹರದನಹಳ್ಳಿ ಹೋಬಳಿ ಮಟ್ಟದ ಹಿರಿಯ ಪ್ರಾಥಮಿಕ/ಪ್ರೌಢಶಾಲಾ ಕ್ರೀಡಾಕೂಟಕ್ಕೆ ಗುಂಡು ಎಸೆಯುವ ಮೂಲಕ ಚಾಲನೆ ನೀಡಿ ಮಾತನಾಡಿದರು.
ಶಿಕ್ಷಣದ ಜೊತೆಗೆ ಕ್ರೀಡೆಗೂ ಸಮಾನ ಮಹತ್ವ ನೀಡುವುದು ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಗೆ ಅತ್ಯಂತ ಅಗತ್ಯವಾಗಿದೆ. ಅಕ್ಷರ ಕಲಿಕೆ ನಮ್ಮ ಬುದ್ಧಿಶಕ್ತಿಯನ್ನು ಚುರುಕುಗೊಳಿಸಿದರೆ, ಕ್ರೀಡೆಗಳು ನಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಗಟ್ಟಿಗೊಳಿಸುತ್ತವೆ ಎಂದರು.
ಹರದನಹಳ್ಳಿ ಹೋಬಳಿ ಶಾಲಾ ಮಕ್ಕಳು ತಾಲೂಕು, ಜಿಲ್ಲೆ, ರಾಜ್ಯ ಮಟ್ಟದಲ್ಲಿ ಉತ್ತಮ ಸಾಧನೆ ಮಾಡಿ ಹರದನಹಳ್ಳಿ ಹೋಬಳಿ, ಜಿಲ್ಲೆಗೆ ಕೀರ್ತಿ ತಂದು ಕೊಡಬೇಕು ಎಂದು ಹೇಳಿದರು
ಅಧ್ಯಕ್ಷತೆ ವಹಿಸಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಹನುಮಶೆಟ್ಟಿ ಮಾತನಾಡಿ. ಕ್ರೀಡೆಯು ವಿದ್ಯಾರ್ಥಿಗಳ ದೈಹಿಕ, ಮಾನಸಿಕ ಮತ್ತು ಸಾಮಾಜಿಕ ಬೆಳವಣಿಗೆಗೆ ಅತ್ಯಗತ್ಯವಾಗಿದೆ. ಇದು ಕೇವಲ ಪಠ್ಯಪುಸ್ತಕಗಳ ಜ್ಞಾನದಿಂದ ವ್ಯಕ್ತಿತ್ವದ ಸಂಪೂರ್ಣ ವಿಕಸನ ಸಾಧ್ಯವಿಲ್ಲ; ಅದಕ್ಕೆ ಕ್ರೀಡೆಯೂ ಪೂರಕವಾಗಿರಬೇಕು ಎಂದರು.
ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಹಾದೇವಸ್ವಾಮಿ ಕ್ರೀಡಾಜ್ಯೋತಿ ಸ್ವೀಕರಿಸಿ ಮಾತನಾಡಿ, ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಜೊತೆಗೆ ಕ್ರೀಡೆಯಲ್ಲೂ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಎಸ್.ಬಸವರಾಜು, ಪ್ರಾಥಮಿಕ ಶಿಕ್ಷಕರ ಸಂಘದ ಸಂಘಟನಾ ಕಾರ್ಯದರ್ಶಿ ಶ್ವೇತ, ಸದಸ್ಯ ಸಿ.ಮಲ್ಲಿಕಾರ್ಜುನ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸದಸ್ಯ ಮಹಾದೇವಸ್ವಾಮಿ,ಗ್ರೇಡ್ 2 ದೈಹಿಕ ಶಿಕ್ಷಕ ಶಿಕ್ಷಕರ ಸಂಘದ ಅಧ್ಯಕ್ಷ ಚಿಕ್ಕಬಸವಯ್ಯ, ಕಾರ್ಯದರ್ಶಿ ಕುಮಾರಸ್ವಾಮಿ, ಸಿಆರ್ ಪಿ ಗುರುಸ್ವಾಮಿ, ಶಿವನಂಜಯ್ಯ, ಮಹಾದೇವಸ್ವಾಮಿ, ಹಿರಿಯ ಮುಖ್ಯ ಶಿಕ್ಷಕ ಹರದನಹಳ್ಳಿ ನಟರಾಜು, ಹಿರಿಯ ದೈಹಿಕ ಶಿಕ್ಷಣ ಶಿಕ್ಷಕ ಡಿ.ಶೇಖರ್, ದೊಡ್ಡರಾಜು ಹಾಗೂ ಶಾಲಾ ಮಕ್ಕಳು ಭಾಗವಹಿಸಿದ್ದರು.
