ಚಾಮರಾಜನಗರ: ಚಾಮರಾಜನಗರ ಮೀಸಲು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸುನೀಲ್ ಬೋಸ್ ಬುಧವಾರ ಜಿಲ್ಲಾಧಿಕಾರಿ, ಜಿಲ್ಲಾ ಚುನಾವಣಾ ಅಧಿಕಾರಿಯಾಗಿರುವ ಸಿ.ಟಿ.ಶಿಲ್ಪಾ ನಾಗ್ ಅವರಿಗೆ ನಾಮಪತ್ರ ಸಲ್ಲಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಚಿವರು ಹಾಗೂ ಶಾಸಕರು ಅಭ್ಯರ್ಥಿ ಬೋಸ್ ಪರ ನಗರದಲ್ಲಿ ರೋಡ್ ಶೋ ನಡೆಸಿದರು.
ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಮೂರು ದಿನಗಳಿಂದ ಮೈಸೂರು, ಚಾಮರಾಜನಗರ ಕ್ಷೇತ್ರ ವ್ಯಾಪ್ತಿಯಲ್ಲಿ ಓಡಾಡಿದ್ದೇನೆ. ಎರಡೂ ಜಿಲ್ಲೆಗಳಲ್ಲಿ ಪಕ್ಷದ ಕಾರ್ಯಕರ್ತರಲ್ಲಿ ಬಹಳ ಹುರುಪಿದೆ. ದಿವಂಗತ ಧ್ರುವನಾರಾಯಣ ಅವರು ಎರಡು ಬಾರಿ ಸಂಸದರಾಗಿದ್ದಾಗ ಈ ಹುರುಪನ್ನು ನೋಡಿದ್ದೆ. ಈ ಬಾರಿ ಸುನೀಲ್ ಬೋಸ್ 3 ಲಕ್ಷ ಮತಗಳಿಂದ ಗೆಲುವು ಸಾಧಿಸಲಿದ್ದಾರೆ ಎಂದು ಹೇಳಿದರು.

ಚಾಮರಾಜನಗರ ಕ್ಷೇತ್ರದಲ್ಲಿ 8 ವಿಧಾನಸಭಾ ಕ್ಷೇತ್ರಗಳಿದ್ದು, ಏಳರಲ್ಲಿ ಕಾಂಗ್ರೆಸ್ ಶಾಸಕರಿದ್ದಾರೆ. ಎಲ್ಲ ಕಡೆ ಕಾಂಗ್ರೆಸ್ ಅಲೆಯಿದೆ. ಮೋದಿ ಅಲೆಯಿಲ್ಲ. ಕರ್ನಾಟಕಕ್ಕೆ ಮೋದಿಯವರು ಏನನ್ನೂ ಮಾಡಿಲ್ಲ. ಏಳು ಕೋಟಿ ಕನ್ನಡಿಗರಿಗೆ ಅನ್ಯಾಯ ಮಾಡಿದ್ದಾರೆ. ಆದರೂ ರಾಜ್ಯದ ಬಿಜೆಪಿ ಮುಖಂಡರು ಅವರನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ ಎಂದು ಸಿದ್ದರಾಮಯ್ಯ ಕಿಡಿಕಾರಿದರು.
10 ವರ್ಷ ಕೇಂದ್ರದಲ್ಲಿ ಆಡಳಿತ ನಡೆಸಿದ ಬಿಜೆಪಿ ನುಡಿದಂತೆ ನಡೆಯಲಿಲ್ಲ. ಸುಳ್ಳನ್ನು ಹೇಳಿ ಜನರಿಗೆ ಮೋಸ ಮಾಡಿದ್ದಾರೆ. ಆದರೆ, ಕಾಂಗ್ರೆಸ್ ನುಡಿದಂತೆ ನಡೆದಿದೆ. 2013ರಲ್ಲಿ ನಮ್ಮ ಸರ್ಕಾರವಿದ್ದಾಗ ಎಲ್ಲ ಭರವಸೆಗಳನ್ನು ಈಡೇರಿಸಿತ್ತು. ಈ ಬಾರಿ ಐದು ಗ್ಯಾರೆಂಟಿಗಳನ್ನು ಈಡೇರಿಸಿದ್ದೇವೆ ಎಂದರು.
ಸಚಿವರಾದ ಪರಮೇಶ್ವರ, ಸತೀಶ ಜಾರಕಿಹೊಳಿ, ಎಚ್.ಸಿ.ಮಹದೇವಪ್ಪ, ಶಾಸಕ ಸಿ.ಪುಟ್ಟರಂಗಶೆಟ್ಟಿ ಮಾತನಾಡಿ ದರು. ಅಭ್ಯರ್ಥಿ ಸುನೀಲ್ ಬೋಸ್, ಶಾಸಕರಾದ ಎ.ಆರ್.ಕೃಷ್ಣಮೂರ್ತಿ, ಎಚ್.ಎಂ.ಗಣೇಶಪ್ರಸಾದ್, ಅನಿಲ್ ಚಿಕ್ಕಮಾದು, ರವಿಶಂಕರ್, ದರ್ಶನ್ ಧ್ರುವನಾರಾಯಣ್, ಮಾಜಿ ಶಾಸಕರಾದ ಆರ್.ನರೇಂದ್ರ, ಜಿ.ಎನ್. ನಂಜುಂಡಸ್ವಾಮಿ, ಯತೀಂದ್ರ ಸಿದ್ದರಾಮಯ್ಯ, ಮಾಜಿ ಸಂಸದ ಕಾಗಲವಾಡಿ ಎಂ.ಶಿವಣ್ಣ, ಕಾಡಾ ಅಧ್ಯಕ್ಷ, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪಿ.ಮರಿಸ್ವಾಮಿ, ಪದಾಧಿಕಾರಿಗಳು, ಮುಖಂಡರು ಇದ್ದರು.
ನಾಮಪತ್ರ ಸಲ್ಲಿಸುವುದಕ್ಕೂ ಮುನ್ನ ಸುನೀಲ್ ಬೋಸ್ ಅವರು ಸಚಿವರು, ಶಾಸಕರೊಂದಿಗೆ ಚಾಮರಾಜೇಶ್ವರ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.