- ಪ್ರಕೃತಿ ವಿಕೋಪ ನಿರ್ವಹಣಾ ಜಿಲ್ಲಾಉಸ್ತುವಾರಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಸೂಚನೆ
ಚಾಮರಾಜನಗರ, ಜೂನ್ 28 (ಕರ್ನಾಟಕ ವಾರ್ತೆ):- ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಯಾವುದೇ ತೊಂದರೆಯಾಗದಂತೆ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ನಗರಾಭಿವೃದ್ಧಿ ಸಚಿವರು ಹಾಗೂ ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಗಳ ಪ್ರಕೃತಿ ವಿಕೋಪ ನಿರ್ವಹಣಾ ಉಸ್ತುವಾರಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ತಿಳಿಸಿದರು.
ಮೈಸೂರಿನ ಜಿಲ್ಲಾ ಪಂಚಾಯತ್‍ನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಇಂದು ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಗೆ ಸಂಬಂಧಿಸಿದಂತೆ ಕುಡಿಯುವ ನೀರಿನ ಸಮಸ್ಯೆ, ಕೃಷಿ, ಜಾನುವಾರುಗಳ ಮೇವು, ವಿಪತ್ತು ನಿರ್ವಹಣಾ ಸಂಬಂಧ ನಡೆದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಚಾಮರಾಜನಗರ ಜಿಲ್ಲೆಗೆ ಸಂಬಂಧಿಸಿದಂತೆ ಮಳೆ, ಕೃಷಿ ಚಟುವಟಿಕೆಗಳು, ಕುಡಿಯುವ ನೀರು, ಜಾನುವಾರುಗಳ ಮೇವಿನ ಲಭ್ಯತೆ ಸೇರಿದಂತೆ ಇನ್ನಿತರ ವಿಷಯಗಳ ಕುರಿತು ಮಾಹಿತಿ ಪಡೆದ ಸಚಿವರು ಜನರಿಗೆ ನೀರು ಒದಗಿಸುವುದು ಅತ್ಯಂತ ತುರ್ತು ಕೆಲಸವಾಗಿದೆ. ಕುಡಿಯುವ ನೀರಿಗೆ ಯಾವುದೇ ತೊಂದರೆಯಾಗದಂತೆ ಪೂರೈಸಬೇಕು. ಎಲ್ಲಿಯೂ ಸಹ ಯಾವುದೇ ಸಮಸ್ಯೆಗಳಾಗದಂತೆ ಅಧಿಕಾರಿಗಳು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ತಿಳಿಸಿದರು.
ಚಾಮರಾಜನಗರ ಜಿಲ್ಲೆಯ ನಗರ, ಪಟ್ಟಣ ಪ್ರದೇಶಗಳಲ್ಲಿ ಅಮೃತ್ 2ರ ಯೋಜನೆಯಡಿ ಕೈಗೆತ್ತಿಕೊಂಡಿರುವ ಕುಡಿಯುವ ನೀರಿನ ಕಾಮಗಾರಿಯನ್ನು ವೇಗವಾಗಿ ಪೂರ್ಣಗೊಳಿಸಿ ನೀರೊದಗಿಸಬೇಕೆಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.
ಮಳೆ ಕೊರತೆಯಾಗಿರುವ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ರೈತರಿಗೆ ಹವಾಮಾನ ಆಧಾರದ ಮೇಲೆ ಹಾಗೂ ಕಡಿಮೆ ನೀರಿನಲ್ಲಿ ಬೆಳೆಯಬಹುದಾದ ರಾಗಿ, ಇತರೆ ಕಾಳುಗಳನ್ನು ಬೆಳೆಯಲು ರೈತರಿಗೆ ಉತ್ತೇಜಿಸಿ, ಜಾಗೃತಿ ಮೂಡಿಸುವಂತೆ ತಿಳಿಸಿದರು.
ಹೊಸ ಕೊಳವೆ ಬಾವಿಗಳನ್ನು ಕೊರೆಯುವ ಸಂದರ್ಭದಲ್ಲಿ ಅರಣ್ಯ ಇಲಾಖೆ ಯಾವುದೇ ಅಡ್ಡಿ ಉಂಟು ಮಾಡಬಾರದು. ನಿಯಮಾನುಸಾರ ಅನುಮತಿ ನೀಡಬೇಕು. ಅಗ್ನಿಶಾಮಕ ಹಾಗೂ ಅರಣ್ಯ ಇಲಾಖೆಯವರು ಅಗ್ನಿ ಅವಘಡಗಳಿಗೆ ಅವಕಾಶವಾಗದಂತೆ ಎಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಸಚಿವರು ನಿರ್ದೇಶನ ನೀಡಿದರು.
ನೀರಿನ ಸಮಸ್ಯೆ ಇರುವ ಸ್ಥಳಗಳಿಗೆ ಅಧಿಕಾರಿಗಳು ಖುದ್ದು ಭೇಟಿ ನೀಡಬೇಕು. ಕೊಳವೆ ಬಾವಿ ಕೊರೆಸಿದ ಬಳಿಕ ವಿದ್ಯುತ್ ಸಂಪರ್ಕವನ್ನು ಶೀಘ್ರ ಕೊಡಿಸಿ ಜನರಿಗೆ ನೀರು ಪೂರೈಸಬೇಕು. ಹೊಸ ಕೊಳವೆ ಬಾವಿಗಳನ್ನು ಕೊರೆಸಿದಾಗ ಮತ್ತು ಟ್ಯಾಂಕರ್ ಗಳ ಮೂಲಕ ನೀರು ಸರಬರಾಜು ಸಂದರ್ಭದಲ್ಲಿ ನೀರಿನ ಮಾದರಿಗಳನ್ನು ಸಂಗ್ರಹಿಸಿ, ಪರೀಕ್ಷಿಸಬೇಕು ಎಂದು ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ತಿಳಿಸಿದರು.
ಲೋಕಸಭಾ ಸದಸ್ಯರಾದ ಸುನೀಲ್ ಬೋಸ್ ಅವರು ಮಾತನಾಡಿ ಹನೂರು ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಿದೆ. ಅರಣ್ಯ ಪ್ರದೇಶದ ಜನವಸತಿ ಇರುವ ಸ್ಥಳಗಳಲ್ಲಿ ಹೆಚ್ಚಿನ ತೊಂದರೆ ಇದೆ. ಜನರಿಗೆ ಶುದ್ಧ ನೀರು ಒದಗಿಸಬೇಕಿದೆ. ನೀರು ಸರಬರಾಜು ಮಾಡುವ ಮೊದಲು ಶುದ್ಧತೆಯ ಪರೀಕ್ಷೆ ಆಗಬೇಕೆಂದು ತಿಳಿಸಿದರು.
ಶಾಸಕರಾದ ಎಚ್.ಎಂ. ಗಣೇಶ್ ಪ್ರಸಾದ್ ಅವರು ಸಹ ಮಾತನಾಡಿ ತಮ್ಮ ಕ್ಷೇತ್ರದ ಕುಡಿಯುವ ನೀರಿನ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಲು ಕ್ರಮ ವಹಿಸಬೇಕೆಂದು ತಿಳಿಸಿದರು.
ಜಿಲ್ಲೆಯ ಮೇವು ಲಭ್ಯತೆಯ ಬಗ್ಗೆ ವಿವರ ನೀಡಿದ ಜಿಲ್ಲಾಧಿಕಾರಿ ಶ್ರೀರೂಪ ಅವರು ಸದ್ಯಕ್ಕೆ ಜಾನುವಾರುಗಳಿಗೆ ಮೇವಿನ ಸಮಸ್ಯೆ ಎದುರಾಗಿಲ್ಲ. ಮಳೆ ಬಾರದಿದ್ದಲ್ಲಿ ಮುಂದೆ ಸಮಸ್ಯೆ ಉಂಟಾಗಬಹುದೆಂದು ಹೇಳಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಅವರು ಮಾತನಾಡಿ ನೀರಿನ ಸಮಸ್ಯೆ ಎದುರಾಗಬಹುದಾದ ಗ್ರಾಮಗಳನ್ನು ಗುರುತಿಸಿದ್ದೇವೆ. ಲಭ್ಯವಿರುವ ಖಾಸಗಿ ಬಾವಿಗಳನ್ನು ಈಗಾಗಲೇ ಗುರುತಿಸಿದ್ದೇವೆ. ಜನರಿಗೆ ಒದಗಿಸುವ ನೀರಿನ ಮಾದರಿಯನ್ನು ಪರೀಕ್ಷೆ ಮಾಡಲಾಗುತ್ತಿದೆ ಎಂದು ಸಭೆಯಲ್ಲಿ ವಿವರ ನೀಡಿದರು.
ಮೈಸೂರು ಜಿಲ್ಲೆಯ ಶಾಸಕರಾದ ರವಿಶಂಕರ್, ಶ್ರೀವತ್ಸ, ಹರೀಶ್ ಗೌಡ, ತನ್ವೀರ್ ಸೇಠ್,ಅನಿಲ್ ಚಿಕ್ಕಮಾದು, ದರ್ಶನ್ ಧ್ರುವನಾರಾಯಣ್ ಡಾ. ಡಿ. ತಿಮ್ಮಯ್ಯ, ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮಿಕಾಂತರೆಡ್ಡಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಯುಕೇಶ್ ಕುಮಾರ್, ಚಾಮರಾಜನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ. ಮುತ್ತುರಾಜು, ಮೈಸೂರು ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಸಭೆಯಲ್ಲಿ ಉಪಸ್ಥಿತರಿದ್ದರು.