ಚಾಮರಾಜನಗರ: ಶುದ್ದ ಕುಡಿಯುವ ನೀರು, ಸ್ವಚ್ಚತೆ ಸೇರಿದಂತೆ ಇನ್ನಿತರ ಕ್ರಮಗಳಿಗೆ ಒತ್ತು ನೀಡುವ ಮೂಲಕ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಮುಂಜಾಗ್ರತೆ ವಹಿಸುವಂತೆ ಜಿಲ್ಲಾಧಿಕಾರಿ ಶ್ರೀರೂಪ ಅವರು ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಜಿಲ್ಲಾ ಸರ್ವಲೆನ್ಸ್ ಮತ್ತು ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಾರ್ಯಕ್ರಮ ಅನುಷ್ಠಾನ ಕುರಿತ ಸಾಂಕ್ರಾಮಿಕ ರೋಗಗಳ ತಡೆ ಕಾರ್ಯಕ್ರಮದ ಜಿಲ್ಲಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕುಡಿಯುವ ನೀರಿನ ಮೂಲಗಳಿಗೆ ಕಲುಷಿತ ನೀರು ಸೇರಬಾರದು. ಪರೀಕ್ಷಿಸಿದ ನೀರಿನ ಮಾದರಿ ಕಲುಷಿತ ಎಂದು ಧೃಡಪಟ್ಟ ತಕ್ಷಣ ನೀರನ್ನು ಶುದ್ದೀಕರಿಸಲು ಕ್ರಮವಹಿಸಬೇಕು. ಕೆಟ್ಟು ಹೋಗಿರುವ ಪೈಪ್‍ಲೈನ್‍ಗಳನ್ನು ಶೀಘ್ರ ದುರಸ್ಥಿಗೊಳಿಸಬೇಕು. ಒಳಚರಂಡಿಗಳಲ್ಲಿ ಕೊಳಚೆ ನೀರು ಸರಾಗವಾಗಿ ಹರಿದು ಹೋಗುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಯವರು ತಿಳಿಸಿದರು.
ಟ್ಯಾಂಕರ್ ಮೂಲಕ ಕುಡಿಯುವ ನೀರು ಸರಬರಾಜು ಮಾಡುವ ಸಂದರ್ಭದಲ್ಲಿ ನೀರು ಪರೀಕ್ಷೆ ಮಾಡಿ ಯೋಗ್ಯವೆಂದು ದೃಢಿಕರಿಸಿದ ನಂತರವೇ ಸರಬರಾಜು ಮಾಡಬೇಕು. ಹೋಟೆಲ್ ಗಳಲ್ಲಿ ಶುದ್ದ ಕುಡಿಯುವ ನೀರು ಪೂರೈಸಲಾಗುತ್ತಿದೆಯೇ ಎಂದು ಪರಿಶೀಲಿಸಬೇಕು. ಕಟ್ಟಡ ನಿರ್ಮಾಣ ಸ್ಥಳಗಳಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಪ್ಲಾಸ್ಟಿಕ್, ಉಪಯೋಗಿಸಿದ ಎಳನೀರು ಚಿಪ್ಪು, ಇನ್ನಿತರ ತ್ಯಾಜ್ಯಗಳನ್ನು ವಿಲೇವಾರಿ ಮಾಡಬೇಕು ಎಂದರು.
ಸೊಳ್ಳೆಗಳಿಂದ ಹರಡುವ ರೋಗಗಳ ನಿಯಂತ್ರಣಕ್ಕಾಗಿ ಲಾರ್ವಾ ಸಮೀಕ್ಷೆ ಕೈಗೊಳ್ಳಬೇಕು. ಪ್ರಾಣಿಗಳಲ್ಲಿ ಅಸಹಜ ಸಾವು ಕಂಡು ಬಂದಲ್ಲಿ ಆರೋಗ್ಯ ಇಲಾಖೆಗೆ ವರದಿ ಮಾಡಬೇಕು. ಪಶುಪಾಲನಾ ಇಲಾಖೆಯು ಪ್ರಾಣಿಗಳಿಂದ ಮನುಷ್ಯರಿಗೆ ಹರಡಬಹುದಾದ ರೋಗಗಳ ತಡೆಗೆ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಬೇಕು. ರೇಬಿಸ್ ನಿಯಂತ್ರಣಕ್ಕೂ ಗಮನ ಹರಿಸಬೇಕು ಎಂದು ತಿಳಿಸಿದರು.
ಅರಣ್ಯ ಇಲಾಖೆ ಪಕ್ಷಿಧಾಮಗಳಲ್ಲಿ, ಅರಣ್ಯದಲ್ಲಿ ಪ್ರಾಣಿ ಪಕ್ಷಿಗಳ ಅಸಹಜ ಮರಣ ಪ್ರಕರಣಗಳು ವರದಿಯಾದರೆ ತಕ್ಷಣವೇ ಆರೋಗ್ಯ ಇಲಾಖೆಗೆ ಮಾಹಿತಿ ನೀಡಬೇಕು. ಪ್ರವಾಸಿಗರಿಗೆ ಪ್ರಾಣಿಜನ್ಯ ರೋಗದ ಕುರಿತು ಮುಂಜಾಗ್ರತಾ ಕ್ರಮಗಳ ಅರಿವು ಮೂಡಿಸುವ ಬಿತ್ತಿಪತ್ರಗಳನ್ನು ಪ್ರದರ್ಶಿಸಬೇಕು ಎಂದು ಹೇಳಿದರು.
ಅಂಗನವಾಡಿ, ಹಾಸ್ಟೆಲ್, ಶಾಲೆಗಳಲ್ಲಿ ಪೌಷ್ಠಿಕ ಆಹಾರ, ಶುದ್ದ ಕುಡಿಯುವ ನೀರು ಇರುವಂತೆ ನೋಡಿಕೊಳ್ಳಬೇಕು. ತಿಂಡಿ-ಊಟ ತಯಾರಿಸುವವರು ಸ್ವಚ್ಚತೆಯಿಂದ ಇರುವಂತೆ ಅಧಿಕಾರಿಗಳು ಸೂಚಿಸಬೇಕು. ಶೌಚಾಲಯ ವ್ಯವಸ್ಥೆ, ಪರಿಸರ ಸ್ವಚ್ಚತೆ, ಘನತ್ಯಾಜ್ಯ ವಿಲೇವಾರಿ ಸಮರ್ಪಕವಾಗಿರಬೇಕು. ವಿದ್ಯಾರ್ಥಿಗಳು, ಸಾರ್ವಜನಿಕರಿಗೆ ಪರಿಸರ ಹಾಗೂ ಸಾಂಕ್ರಾಮಿಕ ರೋಗಗಳ ತಡೆಗೆ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ವ್ಯಾಪಕವಾಗಿ ಅಯೋಜನೆ ಮಾಡುವಂತೆ ಜಿಲ್ಲಾಧಿಕಾರಿ ಶ್ರೀರೂಪ ಅವರು ತಿಳಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್. ಚಿದಂಬರ, ಆರೋಗ್ಯ ಇಲಾಖೆಯ ಕಾರ್ಯಕ್ರಮ ಅಧಿಕಾರಿಗಳಾದ ಡಾ. ಸುಂದರೇಶ್, ಡಾ. ಚಂದ್ರಶೇಖರ್, ತಾಲೂಕು ಆರೋಗ್ಯಾಧಿಕಾರಿಗಳು, ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
Like this:
Like Loading...
Related