ಚಾಮರಾಜನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಅಂಗನವಾಡಿ ಮೂಲಸೌಕರ್ಯದ ಜೊತೆಗೆ ಮಕ್ಕಳಿಗೆ ಹಾಗೂ ಗರ್ಭಿಣಿಯರಿಗೆ ನೀಡುವ ಆಹಾರ ಗುಣಮಟ್ಟದಿಂದ ಕೂಡಿರುವಂತೆ ನೋಡಿಕೊಳ್ಳಬೇಕೆಂದು ಲೋಕಸಭಾ ಸದಸ್ಯರಾದ ಸುನೀಲ್ ಬೋಸ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾ ಪಂಚಾಯತ್ ನೂತನ ಸಭಾಂಗಣದಲ್ಲಿಂದು ನಡೆದ ಜಿಲ್ಲಾಮಟ್ಟದ ಜಿಲ್ಲಾ ಅಭಿವೃದ್ಧಿ ಸಮನ್ವಯ ಹಾಗೂ ಉಸ್ತುವಾರಿ ಸಮಿತಿ ಪರಿಶೀಲನಾ (ದಿಶಾ) ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಸಾಕಷ್ಟು ಅಂಗನವಾಡಿಗಳಿಗೆ ಸ್ವಂತ ಕಟ್ಟಡಗಳಿಲ್ಲದೇ ಬಾಡಿಗೆ ಕಟ್ಟಡಗಳಲ್ಲಿ ನಡೆಯುತ್ತಿವೆ. ಬಾಡಿಗೆ ಕಟ್ಟಡಗಳಲ್ಲಿ ಮೂಲ ಸೌಕರ್ಯಗಳ ಕೊರತೆ ಇದೆ. ಇದಕ್ಕಾಗಿ ಎಲ್ಲಾ ತಾಲೂಕುಗಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಆಯಾ ತಾಲೂಕು ತಹಶೀಲ್ದಾರರೊಂದಿಗೆ ಸಮನ್ವಯ ಸಾಧಿಸಿ ಅಂಗನವಾಡಿ ಕಟ್ಟಡಗಳಿಗೆ ಜಾಗ ಗುರುತಿಸಿ ಮಂಜೂರು ಮಾಡಿಸಿಕೊಳ್ಳಬೇಕು. ಅಂಗನವಾಡಿಗಳಲ್ಲಿ ಅಗತ್ಯ ಮೂಲ ಸೌಲಭ್ಯಗಳನ್ನು ಕಲ್ಪಿಸಿ ಮಕ್ಕಳಿಗೆ ಅನುಕೂಲ ಮಾಡಿಕೊಡುವ ಕಾರ್ಯ ಒಂದು ತಿಂಗಳೊಳಗೆ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಪರಿಶಿಷ್ಟ ವರ್ಗಗಳ ಇಲಾಖೆಗೆ ಸಂಬಂಧಿಸಿದಂತೆ ಜಿಲ್ಲೆಯ ಹಾಡಿಗಳಲ್ಲಿ ವಿತರಿಸುವ ಪೌಷ್ಠಿಕ ಆಹಾರ (ನ್ಯೂಟ್ರಿಷಿಯನ್ ಫುಡ್) ಕಳಪೆಯಾಗಿರುವ ಬಗ್ಗೆ ದೂರುಗಳಿವೆ. ಮುಂದಿನ ದಿನಗಳಲ್ಲಿ ಹಾಡಿ ಜನರಿಗೆ ಸರಬರಾಜಾಗುವ ಆಹಾರ ಗುಣಮಟ್ಟದಿಂದ ಕೂಡಿರುವ ಬಗ್ಗೆ ಅಧಿಕಾರಿಗಳಿಗೆ ಪರಿಶೀಲಿಸಿ ಕ್ರಮ ವಹಿಸಬೇಕು. ಕೇಂದ್ರಪುರಸ್ಕøತ ಯೋಜನೆಗಳು ಸಮರ್ಪಕವಾಗಿ ಅನುಷ್ಠಾನಗೊಳಿಸುವಂತೆ ಸಂಸದರು ನಿರ್ದೇಶನ ನೀಡಿದರು.
ಇ-ಸ್ವತ್ತು ನೀಡುವ ಸಂಬಂಧ ಜನಸಾಮಾನ್ಯರನ್ನು ಕಚೇರಿಗೆ ಅಲೆದಾಡಿಸಬಾರದು. ನಿಗದಿತ ಕಾಲಮಿತಿಯಲ್ಲಿ ಇ-ಸ್ವತ್ತು ನೀಡಲು ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿಗಳು ಹಾಗೂ ಗ್ರಾಮಮಟ್ಟದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮುಂದಾಗಬೇಕು. ಯಾವುದೇ ದೂರುಗಳು ಬರದಂತೆ ಎಚ್ಚರಿಕೆ ವಹಿಸಿ ಶೀಘ್ರವಾಗಿ ಖಾತೆ ಮಾಡಿಕೊಡಬೇಕು. ಕಂದಾಯ ಇಲಾಖೆಯಲ್ಲಿ ಮದ್ಯವರ್ತಿಗಳ ಹಾವಳಿ ತಡೆಗಟ್ಟಬೇಕು. ಆಸ್ತಿ ಹಾಗೂ ಜಮೀನಿನ ಸರ್ವೇ ಕಾರ್ಯ ಹಾಗೂ ಒತ್ತುವರಿ ತೆರವುಗೊಳಿಸುವಿಕೆ ಚುರುಕುಗೊಳಿಸಬೇಕು ಎಂದು ಲೋಕಸಭಾ ಸದಸ್ಯರು ತಿಳಿಸಿದರು.
ಜಲಜೀವನ್ ಮಿಷನ್ ಯೋಜನೆಯಡಿ ಕುಡಿಯುವ ನೀರಿನ ಕಾಮಗಾರಿ ಮಹದೇಶ್ವರ ಬೆಟ್ಟ ಹಾಗೂ ಗೋಪಿನಾಥಂ ಗ್ರಾಮಗಳಲ್ಲಿ ನಿರೀಕ್ಷಿತ ಪ್ರಗತಿ ಸಾಧಿಸಿಲ್ಲ. ಕಾಮಗಾರಿ ಸಮಯದಲ್ಲಿ ಸಾಕಷ್ಟು ರಸ್ತೆಗಳನ್ನು ಅಗೆದು ಮುಚ್ಚದೇ ಬಿಟ್ಟಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ದಾಖಲಾಗುತ್ತಿವೆ. ಅರಣ್ಯ ಇಲಾಖೆ ಕಾಮಗಾರಿ ಅನುಷ್ಠಾನಕ್ಕೆ ಸಹಕಾರ ನೀಡಬೇಕು. ಪುಣಜನೂರು ಸೇರಿದಂತೆ 21 ಗ್ರಾಮಗಳಿಗೆ ಕುಡಿಯುವ ನೀರಿನ ಸಂಪರ್ಕ ಕಾಮಗಾರಿಯ ಪೈಪ್ ಲೈನ್ ಅಳವಡಿಕೆಗೆ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಯಾವುದೇ ತೊಂದರೆ ನೀಡಬಾರದು. ಕಾಮಗಾರಿಯನ್ನು ವೇಗಗೊಳಿಸಿ ಜನರಿಗೂ ಅನೂಕೂಲ ಮಾಡಿಕೊಡಬೇಕು ಎಂದರು.
ಇತ್ತೀಚೆಗೆ ಚಾಮರಾಜನಗರ ತಾಲೂಕಿನ ಹೊಮ್ಮ ಸರ್ಕಾರಿ ಶಾಲೆಯಲ್ಲಿ ಮಕ್ಕಳು ವರ್ಗಾವಣೆ ಪತ್ರ ಪಡೆದಿರುವ ಸಂಬಂಧ ಶಾಲಾ ಶಿಕ್ಷಣ ಇಲಾಖೆ ಅಧಿಕಾರಿಗಳಿಂದ ಮಾಹಿತಿ ಪಡೆದ ಸಂಸದರು ಮಕ್ಕಳು ಮತ್ತೆ ಶಾಲೆಗೆ ಹಾಜರಾಗಿರುವ ಬಗ್ಗೆ ಹಾಗೂ ಅಡುಗೆ ಕೆಲಸದ ಮಹಿಳೆಯನ್ನು ಅಲ್ಲಿಯೇ ಮುಂದುವರಿಸಿರುವ ಹಾಗೂ ಹೊಸ ಶಿಕ್ಷಕರನ್ನು ನೇಮಕ ಮಾಡಿರುವ ಕುರಿತು ಪರಿಶೀಲನೆ ನಡೆಸಿದರು. ಯಾವುದೇ ಗೊಂದಲಗಳನ್ನು ಪರಿಹರಿಸಿ ಹೊಂದಾಣಿಕೆಯಿಂದ ಕೆಲಸ ಮಾಡುವಂತೆ ಅಧಿಕಾರಿಗಳು ಶಿಕ್ಷಕರಿಗೆ ತಿಳಿಹೇಳಬೇಕು ಎಂದು ಸಂಸದರು ಹೇಳಿದರು.
ಜಿಲ್ಲೆಯ ಮಹದೇಶ್ವರ ಬೆಟ್ಟದ ಹೂಗ್ಯಂ ವಲಯ ಅರಣ್ಯದಲ್ಲಿ ಹುಲಿಗಳು ಸಾವಿಗೀಡಾದ ಕುರಿತು ಸಂಬಂಧಪಟ್ಟ ಅರಣ್ಯ ಇಲಾಖೆಯ ಅಧಿಕಾರಿಗಳಿಂದ ಮಾಹಿತಿ ಪಡೆದ ಲೋಕಸಭಾ ಸದಸ್ಯರು ಅರಣ್ಯ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯ ಸರಿಯಲ್ಲ. ಮುಂದಿನ ದಿನಗಳಲ್ಲಿ ಅಧಿಕಾರಿಗಳು ಇಂತಹ ಅಗಘಡಗಳಿಗೆ ಅವಕಾಶವಾಗದಂತೆ ತೀವ್ರ್ರ ಕಟ್ಟೆಚ್ಚರ ವಹಿಸಬೇಕು. ಜಿಲ್ಲೆಯ ಅರಣ್ಯ, ವನ್ಯಜೀವಿ ಸಂಪತ್ತನ್ನು ಸಂರಕ್ಷಣೆಯತ್ತ ಗಮನ ಹರಿಸುವಂತೆ ತಾಕೀತು ಮಾಡಿದರು.
ಮುಖ್ಯಮಂತ್ರಿಯವರ ವಿಶೇಷ ಅನುದಾನದಲ್ಲಿ ಕೈಗೊಂಡಿರುವ ಕಾಮಗಾರಿಗಳನ್ನು ನಿರ್ವಹಿಸುವಲ್ಲಿ ವಿಳಂಬ ಧೋರಣೆಯನ್ನು ಸಹಿಸುವುದಿಲ್ಲ. ಕಾಮಗಾರಿಗಳನ್ನು ಅದಷ್ಟು ಬೇಗನೇ ಪೂರ್ಣಗೊಳಿಸಬೇಕು. ಯಾವುದೇ ಅನುದಾನ ವಾಪಸ್ಸು ಸರ್ಕಾರಕ್ಕೆ ಹೋಗದಂತೆ ಎಚ್ಚರ ವಹಿಸಿ ಸದ್ಭಳಕೆ ಮಾಡಿಕೊಳ್ಳಬೇಕು ಎಂದು ಸಂಸದರಾದ ಸುನಿಲ್ ಬೋಸ್ ಅಧಿಕಾರಿಗಳಿಗೆ ತಿಳಿಸಿದರು.
ಇದೇ ವೇಳೆ ಮಾತನಾಡಿದ ಚುಡಾ ಅಧ್ಯಕ್ಷರಾದ ಮಹಮ್ಮದ್ ಅಸ್ಗರ್ ಮುನ್ನಾ ಅವರು ಚಾಮರಾಜನಗರ ಪಟ್ಟಣದಲ್ಲಿ ಹೊಸ ಬಡಾವಣೆಗಳ ರಚನೆಯಾಗಿವೆ. ಆದರೆ ಮೂಲಸೌಕರ್ಯಗಳಿಲ್ಲದೆ ಜನರು ತೊಂದರೆಗೊಳಗಾಗಿದ್ದಾರೆ. ಹೊಸ ಬಡಾವಣೆಗಳಿಗೆ ಸಮರ್ಪಕ ರಸ್ತೆ, ಕುಡಿಯುವ ನೀರಿನ ವ್ಯವಸ್ಥೆ ಇಲ್ಲವಾಗಿವೆ. ಇದನ್ನು ಕೂಡಲೇ ಅಧಿಕಾರಿಗಳು ಪರಿಹರಿಸಬೇಕು ಎಂದರು.
ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಮಾತನಾಡಿ ಕುಡಿಯುವ ನೀರು, ರಸ್ತೆ ನಿರ್ಮಾಣ, ಬೀದಿದೀಪ ಅಳವಡಿಕೆ ಸೇರಿದಂತೆ ನಗರೋತ್ಥಾನ ಕಾಮಗಾರಿ ಅನುಷ್ಟಾನದಲ್ಲಿ ಸಮಸ್ಯೆಗಳಿದ್ದರೆ ತಕ್ಷಣವೇ ಮೇಲಾಧಿಕಾರಿಗಳ ಗಮನಕ್ಕೆ ತಂದು ಪರಿಹರಿಸಿಕೊಳ್ಳಬೇಕು. ಕಾಮಗಾರಿಗಳ ವಹಿಸಿಕೊಂಡಿರುವ ಗುತ್ತಿಗೆದಾರರು ನಿಯಮಿಯ ಕಾಲಾವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸಬೇಕು. ತಪ್ಪಿದಲ್ಲಿ ಅಂತಹ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಲು ಕ್ರಮ ವಹಿಸಬೇಕು. ಮುಂದಿನ ಸಭೆಯೊಳಗೆ ಈ ಸಮಸ್ಯೆಗೆ ಶೀಘ್ರ ಪರಿಹಾರ ಕಂಡುಕೊಳ್ಳಬೇಕು ಎಂದು ತಿಳಿಸಿದರು.
ಸಭೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳು, ರೈಲ್ವೆ ಯೋಜನೆಗಳು. ಕೃಷಿ, ತೋಟಗಾರಿಕೆ, ಮೀನುಗಾರಿಕೆ, ಆರೋಗ್ಯ, ಗ್ರಾಮೀಣಾಭಿವೃದ್ಧಿ, ವಸತಿ ಯೋಜನೆಗಳು, ಇನ್ನಿತರೆ ಕೇಂದ್ರ ಪುರಸ್ಕ್ರುತ ಯೋಜನೆಗಳ ಬಗ್ಗೆ ಲೋಕಸಭಾ ಸದಸ್ಯರಾದ ಸುನಿಲ್ ಬೋಸ್ ಅವರು ವಿವರವಾಗಿ ಪರಿಶೀಲನೆ ನಡೆಸಿದರು.
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷರಾದ ಎಚ್.ವಿ. ಚಂದ್ರು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ. ಕವಿತಾ, ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ, ಇತರೆ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು