ಚಾಮರಾಜನಗರ, ಫೆಬ್ರವರಿ 24 (ಕರ್ನಾಟಕ ವಾರ್ತೆ):- ಜಿಲ್ಲೆಯ ಯಾವುದೇ ಭಾಗದಲ್ಲಿ ಕುಡಿಯುವ ನೀರಿಗೆ ತೊಂದರೆಯಾಗದಂತೆ ಅಗತ್ಯ ಪ್ರಮಾಣದಲ್ಲಿ ಸಮರ್ಪಕವಾಗಿ ನೀರು ಸರಬರಾಜು ಮಾಡಲು ಅಧಿಕಾರಿಗಳು ತುರ್ತು ಕ್ರಮ ತೆಗೆದುಕೊಳ್ಳುವಂತೆ ಪಶುಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದ ನಾಗಮಲೆ ಭವನದಲ್ಲಿಂದು ಕುಡಿಯುವ ನೀರು, ಜಾನುವಾರುಗಳಿಗೆ ಮೇವಿನ ಲಭ್ಯತೆ ಹಾಗೂ ವಿಪತ್ತು ನಿರ್ವಹಣೆ ಸಂಬಂಧ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕುಡಿಯುವ ನೀರು ಸಮಸ್ಯೆ ಇರುವ ಗ್ರಾಮಗಳ ಕುರಿತು ಮಾಹಿತಿ ಪಡೆದ ಜಿಲ್ಲಾ ಉಸ್ತುವಾರಿ ಸಚಿವರು ಪ್ರಸ್ತುತ ಬೇಸಿಗೆ ಆರಂಭವಾಗಿದೆ. ಸಮಸ್ಯಾತ್ಮಕ ಗ್ರಾಮಗಳೆಂದು ಗುರುತಿಸಿರುವ ಕಡೆ ಆದ್ಯತೆ ಮೇರೆಗೆ ನೀರು ಒದಗಿಸುವುದು ನಮ್ಮ ಜವಾಬ್ದಾರಿಯಾಗಿದೆ. ಖಾಸಗಿ ಬೋರ್‍ವೆಲ್, ಟ್ಯಾಂಕರ್ ಸೇರಿದಂತೆ ಪರ್ಯಾಯ ವಿಧಾನಗಳ ಮೂಲಕ ಕುಡಿಯುವ ನೀರನ್ನು ಪೂರೈಸಬೇಕು. ಜೊತೆಗೆ ಮನೆಯ ದಿನಬಳಕೆಗಾಗಿ ಅಗತ್ಯವಿರುವ ನೀರನ್ನೂ ಸಹ ಒದಗಿಸಬೇಕು ಎಂದರು.
ಕುಡಿಯುವ ನೀರಿನ ಸಮಸ್ಯೆ ಇರುವ ಕಡೆ ಅಧಿಕಾರಿಗಳು ಹೆಚ್ಚು ಭೇಟಿ ನೀಡಿ ಪರಿಹಾರ ಕ್ರಮಗಳಿಗೆ ಮುಂದಾಗಬೇಕು. ಯಾವ ಪಂಚಾಯಿತಿಯಲ್ಲಿ ತೊಂದರೆ ಇದೆ ಎಂದು ಖುದ್ದು ವೀಕ್ಷಿಸಬೇಕು. ಪಂಚಾಯತ್ ಅಭಿವೃದ್ದಿ ಅಧಿಕಾರಿಗಳು ವ್ಯಾಪಕವಾಗಿ ತಮ್ಮ ವ್ಯಾಪ್ತಿಯ ಭಾಗಗಳಲ್ಲಿ ಜನರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಬೇಸಿಗೆ ಸಂದರ್ಭದಲ್ಲಿ ವಿಶೇಷ ಗಮನ ಹರಿಸಬೇಕು ಎಂದರು.
ಅಂತರ್ಜಲ ಹೆಚ್ಚಿರುವ ಕಡೆ ಕೊಳವೆಬಾವಿಗಳನ್ನು ಇನ್ನಷ್ಟು ಆಳವಾಗಿ ಕೊರೆದು ಸಮಸ್ಯೆ ಬಗೆಹರಿಸಬೇಕು. ಅನುಷ್ಠಾನದಲ್ಲಿರುವ ಕುಡಿಯುವ ನೀರಿನ ಕಾಮಗಾರಿಯನ್ನು ವಿಳಂಬ ಮಾಡದೇ ಪೂರ್ಣಗೊಳಿಸಬೇಕು. ನಗರ, ಪಟ್ಟಣ ಪ್ರದೇಶಗಳಲ್ಲಿಯೂ ಅಗತ್ಯಕ್ಕೆ ಅನುಗುಣವಾಗಿ ನೀರು ಸರಬರಾಜು ಮಾಡಬೇಕು. ಅಮೃತ್ 2 ಯೋಜನೆಯಡಿ ಚಾಮರಾಜನಗರ ಪಟ್ಟಣಕ್ಕೆ ನೀರು ಒದಗಿಸುವ ಯೋಜನೆಯ ಪ್ರಗತಿ ವೇಗವಾಗಿ ಆಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರು ನಿರ್ದೇಶನ ನೀಡಿದರು.
ಇದೇ ವೇಳೆ ಮಾತನಾಡಿದ ಶಾಸಕರಾದ ಎಂ.ಆರ್. ಮಂಜುನಾಥ್ ಅವರು ಹನೂರು ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದೆ. ಪ್ರಸ್ತುತ 1.90 ಕೋಟಿ ರೂ. ವೆಚ್ಚದ ಕುಡಿಯುವ ನೀರಿನ ಕಾಮಗಾರಿ ನಿರ್ವಹಿಸಲು ಅನುದಾನ ಅಗತ್ಯವಿದೆ. ಅರಣ್ಯದಂಚಿನ ಗ್ರಾಮಗಳಲ್ಲಿ ಕೈಗೆತ್ತಿಕೊಳ್ಳಲಾಗಿರುವ ವಿದ್ಯುತ್ ಕಾಮಗಾರಿ ಮುಂದುವರೆಸಲು ಅರಣ್ಯ ಇಲಾಖೆಯಿಂದ ಯಾವುದೇ ಅಡಚಣೆಯಾಗಬಾರದು ಎಂದರು.
ಮುಂಬರುವ ದಿನಗಳಲ್ಲಿ ಜಾನುವಾರುಗಳಿಗೆ ಅಗತ್ಯವಿರುವ ಮೇವು ಸಂಗ್ರಹಣೆ ಸಂಬಂಧ ವಿವರ ಪಡೆದ ಸಚಿವರು ಮೇವಿಗೆ ಯಾವುದೇ ಕೊರತೆಯಾಗದಂತೆ ದಾಸ್ತಾನು ಮಾಡಬೇಕು. ರೈತರಿಗೆ ಅವರ ಬೇಡಿಕೆ ಅನುಸಾರ ಅಗತ್ಯವಿರುವ ಪ್ರಮಾಣದಲ್ಲಿ ವಿದ್ಯುತ್ ಒದಗಿಸಬೇಕು. ಗ್ರಾಮೀಣ ಭಾಗದ ಜನರ ಸಮಸ್ಯೆಗಳಿಗೆ ಅಧಿಕಾರಿಗಳು ಶೀಘ್ರವೇ ಸ್ಪಂದಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಅವರು ತಿಳಿಸಿದರು.
ಜಿಲ್ಲಾಧಿಕಾರಿ ಶ್ರೀರೂಪ ಅವರು ಮಾತನಾಡಿ ಬೇಸಿಗೆ ವೇಳೆಯಲ್ಲಿ ಕಾಡ್ಗಿಚ್ಚು, ಅಗ್ನಿ ಅನಾಹುತಗಳು ಸಂಭವಿಸದಂತೆ ಅರಣ್ಯ ಇಲಾಖೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು. ವಿಕೋಪ ಸಂದರ್ಭಗಳಲ್ಲಿ ಅಧಿಕಾರಿ ಸಿಬ್ಬಂದಿ, ಅಗ್ನಿಶಾಮಕಗಳ ಸನ್ನದವಾಗಿರಬೇಕು. ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಬವಣೆ ನೀಗಿಸಲು ಪೂರಕವಾಗಿರುವ ಎಲ್ಲ ಕ್ರಮಗಳ ಅನುಷ್ಠಾನಕ್ಕೆ ಮುಂದಾಗಬೇಕು ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಅವರು ಮಾತನಾಡಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ 15ನೇ ಹಣಕಾಸು ಯೋಜನೆಯಡಿ ಸದ್ಬಳಕೆಯಾಗಬೇಕು. ತಾಲೂಕು ಪಂಚಾಯತ್ ಅಭಿವೃದ್ದಿ ಅಧಿಕಾರಿಗಳು ನಿರಂತರ ಉಸ್ತುವಾರಿ ಮಾಡಿ ವಿಶೇಷವಾಗಿ ಬೇಸಿಗೆ ಸಂದರ್ಭದಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ, ಉಪವಿಭಾಗಾಧಿಕಾರಿ ದಿನೇಶ್ ಕುಮಾರ್ ಮೀನಾ, ತಹಶೀಲ್ದಾರರಾದ ಗಿರಿಜಾ, ಬಸವರಾಜು, ಚೈತ್ರ, ತನ್ಮಯ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಇಮ್ಯಾನುವಲ್ ಸಂತೋಷ್, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ಕಿರಣ್, ಪಶುಸಂಗೋಪನೆ ಇಲಾಖೆಯ ಉಪನಿರ್ದೇಶಕರಾದ ಮಂಜುನಾಥ್, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರಾದ ಶಿವಪ್ರಸಾದ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್. ಚಿದಂಬರ, ತಾಲೂಕು ಪಂಚಾಯಿತಿಗಳ ಕಾರ್ಯನಿರ್ವಾಹಕ ಅಧಿಕಾರಿಗಳು, ಇತರೆ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
Like this:
Like Loading...
Related