140ನೇ ದಿನವೂ ಮುಂದುವರೆದ ಕಾವೇರಿ ಹೋರಾಟ

ಚಾಮರಾಜನಗರ: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಕ್ರಮವನ್ನು ಖಂಡಿಸಿ ಕರ್ನಾಟಕ ಸೇನಾ ಪಡೆ ವತಿಯಿಂದ ನಗರದಲ್ಲಿ ಕಳೆದ 139 ದಿನಗಳಿಂದ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದು ಇಂದು ಕೂಡ ರಾಷ್ಟ್ರೀಯ ಹೆದ್ದಾರಿಯನ್ನು ತಡೆದು ಪ್ರತಿಭಟಿಸಿದರು.

ಕರ್ನಾಟಕ ಸೇನಾಪಡೆ ಅಧ್ಯಕ್ಷ .ಚಾ.ರಂ.ಶ್ರೀನಿವಾಸಗೌಡ ಅವರ ನೇತೃತ್ವದಲ್ಲಿ ನಗರದ ಭುವನೇಶ್ವರಿ ವೃತ್ತದಲ್ಲಿ ಜಮಾವಣೆಗೊಂಡ ಕಾರ್ಯಕರ್ತರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು.

ಪ್ರತಿಭಟನೆ ನೇತೃತ್ವ ವಹಿಸಿದ್ದ ಶ್ರೀನಿವಾಸಗೌಡ ಮಾತನಾಡಿ, ಕಾವೇರಿ ನೀರು ಹರಿಸುತ್ತಿರುವ ಕ್ರಮವನ್ನು ಖಂಡಿಸಿ ಸತತವಾಗಿ 140ನೇ ದಿನವೂ ಕೂಡಾ ಹೋರಾಟವನ್ನು ರಾಜ್ಯ ಹೆದ್ದಾರಿಯನ್ನು ತಡೆದು ಪ್ರತಿಭಟಿಸುತ್ತಿದ್ದೇವೆ.

ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ, ತಮಿಳುನಾಡು ಸರ್ಕಾರ ಹಾಗೂ ಕಾವೇರಿ ನಿರ್ವಹಣಾ ಮಂಡಳಿ ವಿರುದ್ಧ ಆಕ್ರೋಶವನ್ನು ವ್ಯಕ್ತಪಡಿಸಿದರು.
ಕೇಂದ್ರ ಸರ್ಕಾರ ಕಾವೇರಿ ನಿರ್ವಹಣಾ ಮಂಡಳಿಯನ್ನು ವಜಾ ಮಾಡಬೇಕು ಇಲ್ಲವಾದಲ್ಲಿ ರಾಜ್ಯಕ್ಕೆ ನ್ಯಾಯ ಸಿಗುವುದಿಲ್ಲ. ತಕ್ಷಣವೇ ಇದನ್ನು ವಜಾ ಮಾಡಬೇಕೆಂದು ಇದೇ ಸಂದರ್ಭದಲ್ಲಿ ಒತ್ತಾಯಿಸಿದರು.

ಜಲಾಶಯಗಳು ಬತ್ತಿ ಹೋಗಿ, ಮಳೆಯಿಲ್ಲದೆ ನಮ್ಮ ಜನತೆ ತತ್ತರಿಸುತ್ತಿದ್ದರೂ ಸಹ ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ಖಂಡಿಸಿದರು. ತಕ್ಷಣವೇ ಇದನ್ನು ನಿಲ್ಲಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ನಿರಂತರವಾದ ಹೋರಾಟವನ್ನು ಮಾಡುತ್ತೇವೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ಚಾ.ವೆಂ.ರಾಜ್ ಗೋಪಾಲ್, ಗು.ಪುರುಷೋತ್ತಮ್, ಮಹೇಶ್‍ಗೌಡ, ಪಣ್ಯದಹುಂಡಿ ರಾಜು, ಸೋಮವಾರಪೇಟೆ ಮಂಜು, ವೀರಭದ್ರ, ನಿಜಧ್ವನಿ ಗೋವಿಂದರಾಜು, ತಾಂಡವಮೂರ್ತಿ, ಭೈರವ, ಪ್ರಕಾಶ್ ಇನ್ನಿತರರಿದ್ದರು.

Leave a Reply

Your email address will not be published. Required fields are marked *