ಚಾಮರಾಜನಗರ: ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುತ್ತಿರುವ ಕ್ರಮವನ್ನು ಖಂಡಿಸಿ ಕರ್ನಾಟಕ ಸೇನಾ ಪಡೆ ವತಿಯಿಂದ ನಗರದಲ್ಲಿ ನಿರಂತರವಾಗಿ ನಡೆಯುತ್ತಿರುವ ಹೋರಾಟ 143ನೇ ದಿನವಾದ ಇಂದೂ ಕೂಡಾ ಮುಂದುವರೆಯಿತು.
ಕರ್ನಾಟಕ ಸೇನಾಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಅವರ ನೇತೃತ್ವದಲ್ಲಿ ನಗರದ ಭುವನೇಶ್ವರಿ ವೃತ್ತದಲ್ಲಿ ಜಮಾವಣೆಗೊಂಡ ಕಾರ್ಯಕರ್ತರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು.
ಚಾ.ರಂ.ಶ್ರೀನಿವಾಸಗೌಡ ಮಾತನಾಡಿ, ಕಾವೇರಿ ನೀರು ಹರಿಸುತ್ತಿರುವ ಕ್ರಮವನ್ನು ಖಂಡಿಸಿ ಸತತವಾಗಿ 143ನೇ ದಿನವೂ ಕೂಡಾ ಹೋರಾಟವನ್ನು ರಾಜ್ಯ ಹೆದ್ದಾರಿಯನ್ನು ತಡೆದು ಪ್ರತಿಭಟಿಸುತ್ತಿದ್ದೇವೆ. ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ, ತಮಿಳುನಾಡು ಸರ್ಕಾರ ಹಾಗೂ ಕಾವೇರಿ ನಿರ್ವಹಣಾ ಮಂಡಳಿ ವಿರುದ್ಧ ಆಕ್ರೋಶವನ್ನು ವ್ಯಕ್ತಪಡಿಸಿದರು.
ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡಿ ರಾಜ್ಯಕ್ಕೆ ನ್ಯಾಯ ದೊರಕಿಸಬೇಕು. ರಾಜ್ಯ ಸರ್ಕಾರಕ್ಕೆ ನೈತಿಕತೆ ಇದ್ದರೆ ಕೂಡಲೇ ತಮಿಳುನಾಡಿಗೆ ನೀರು ಬಿಡುವುದನ್ನು ನಿಲ್ಲಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಕುಡಿಯಲು ಒಂದು ತೊಟ್ಟು ನೀರು ಕೂಡಾ ಸಿಗದಂತಹ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಮಳೆ ಇಲ್ಲ, ಬೆಳೆ ಇಲ್ಲ, ನೀರೂ ಕೂಡಾ ಇಲ್ಲದಂತಾಗುತ್ತಿದೆ. ತಕ್ಷಣ ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುವುದನ್ನು ನಿಲ್ಲಿಸದಿದ್ದರೇ ಉಗ್ರವಾದ ಹೋರಾಟವನ್ನು ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ಚಾ.ವೆಂ.ರಾಜ್ ಗೋಪಾಲ್, ವೀರಭದ್ರ, ನಿಜಧ್ವನಿ ಗೋವಿಂದರಾಜು, ತಾಂಡವಮೂರ್ತಿ, ರಾಜಪ್ಪ, ಮಹೇಶ್‍ಗೌಡ, ಪಣ್ಯದಹುಂಡಿ ರಾಜು, ಸಾಗರ್‍ರಾವತ್ ಇನ್ನಿತರರಿದ್ದರು.