ರವಿಹಂಜ್ ಬಂಧನಕ್ಕೆ ವಿವಿಧ ಮಠಾಧೀಶರ ಆಗ್ರಹ

ಚಾಮರಾಜನಗರ: ವಿಶ್ವಗುರು ಬಸವಣ್ಣ ಹಾಗೂ ಲಿಂಗಾಯತ ಸಮುದಾಯದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಲೇಖಕ ರವಿ ಹಂಜ್ ಅವರನ್ನು ಬಂಧಿಸಿ ಕಾನೂನು ಕ್ರಮ ಜರುಗಿಸಬೇಕು ಎಂದು ಮರಿಯಾಲ ಮಠದ ಶ್ರೀ ಇಮ್ಮಡಿ ಮುರುಘಾರಾಜೇಂದ್ರಸ್ವಾಮೀಜಿ ಆಗ್ರಹಿಸಿದರು.

ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಸವಣ್ಣ ಅವರ ವ್ಯಕ್ತಿತ್ವ ಹಾಗೂ ವಚನ ಸಾಹಿತ್ಯದ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿರುವುದು ಖಂಡನೀಯ. ರವಿ ಹಂಜ್ ಅವರನ್ನು ಬಂಧಿಸಿ ಕ್ರಮ ಕೈಗೊಳ್ಳದಿದ್ದರೇ ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ಉಗ್ರ ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ ನೀಡಿದರು.
೧೨ ನೇ ಶತಮಾನದಲ್ಲಿ ಬಸವಣ್ಣ ಅವರು ಕಾಯಕ ಹಾಗೂ ದಾಸೋಹಕ್ಕೆ ಮನ್ನಣೆ ನೀಡಿದ್ದರು. ವಚನಗಳ ಮೂಲಕ ಸಮಾಜದಲ್ಲಿ ಸಮಾನತೆಯನ್ನು ನಿರ್ಮಾಣ ಮಾಡಲು ಮುಂದಾದರು. ಈಗಾಗಲೇ ಸರ್ಕಾರ ರವಿ ಹಂಜ್ ಬರೆದಿರುವ ಬಸವ ಮಂಟಪ ಪುಸ್ತಕವನ್ನು ಮುಟ್ಟುಗೋಲು ಹಾಕಿಕೊಂಡಿರುವುದು ಸ್ವಾಗತಾರ್ಹ ಎಂದರು.

ನಗರದ ಶ್ರೀಸಿದ್ದಮಲ್ಲೇಶ್ವರ ವಿರಕ್ತಮಠದ ಚೆನ್ನಬಸವಸ್ವಾಮೀಜಿ ಮಾತನಾಡಿ, ೧೨ನೇ ಶತಮಾನದಲ್ಲಿ ಸಮಾನತೆ ಸಾರಿದ ಬಸವಣ್ಣ ಅವರ ವಿರುದ್ಧ ಅವಹೇಳನಕಾರಿಯಾಗಿ ಹೇಳಿಕೆ ನೀಡಿರುವುದು ಖಂಡನೀಯ. ಬಸವಣ್ಣ ಅವರು ಜಾತಿಪದ್ಧತಿ ನಿರ್ಮೂಲನೆ ಸೇರಿದಂತೆ ಇತರೆ ಮೂಢನಂಬಿಕೆಗಳ ವಿರುದ್ಧ ಹೋರಾಡಿದರು. ಅಲ್ಲದೇ ವಚನ ಸಾಹಿತ್ಯವನ್ನು ಜಗತ್ತಿಗೆ ಕೊಟ್ಟರು. ಮುಂದಿನ ದಿನಗಳಲ್ಲಿ ಮಹಾನ್ ಸಾಧಕರ ಬಗ್ಗೆ ಕೆಟ್ಟದಾಗಿ ಮಾತನಾಡದಂತೆ ಕ್ರಮವಹಿಸಬೇಕು ಎಂದು ಒತ್ತಾಯಿಸಿದರು.

ಗೋಷ್ಠಿಯಲ್ಲಿ ಮೂಡುಗೂರು ಮಠದ ಇಮ್ಮಡಿ ಉದ್ದಾನ ಸ್ವಾಮೀಜಿ, ಕಬ್ಬಳ್ಳಿ ಮಠದ ಗುರುಸಿದ್ದಸ್ವಾಮೀಜಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *