- ಕುಡಿಯುವ ನೀರು, ಜಾನುವಾರುಗಳ ಮೇವು ಸಮಸ್ಯೆ ಪರಿಹಾರಕ್ಕೆ ತುರ್ತಾಗಿ ಕ್ರಮವಹಿಸಿ :
- ಬರ ಪರಿಸ್ಥಿತಿ, ಅತಿವೃಷ್ಠಿ ನಿರ್ವಹಣೆ ಕುರಿತ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಸೂಚನೆ
ಚಾಮರಾಜನಗರ: ಜಿಲ್ಲೆಯಲ್ಲಿ ಕುಡಿಯುವ ನೀರು ಹಾಗೂ ಜಾನುವಾರುಗಳ ಮೇವು ಸಮಸ್ಯೆ ಪರಿಹಾರಕ್ಕೆ ಅಧಿಕಾರಿಗಳು ತುರ್ತಾಗಿ ಕ್ರಮ ತೆಗೆದುಕೊಳ್ಳುವಂತೆ ಬರ ಪರಿಸ್ಥಿತಿ, ಅತಿವೃಷ್ಠಿ ನಿರ್ವಹಣೆ ಕುರಿತ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಅವರು ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಕುಡಿಯುವ ನೀರು, ಮೇವು ಸಮಸ್ಯೆ ಹಾಗೂ ಪ್ರಕೃತಿ ವಿಕೋಪ ಸಂಬಂಧ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ, ಜಾನುವಾರುಗಳ ಮೇವಿಗೆ ಕೊರತೆಯಾಗದಂತೆ ಅಧಿಕಾರಿಗಳು ಹೊಣೆಗಾರಿಕೆಯಿಂದ ಕಾರ್ಯನಿರ್ವಹಿಸಬೇಕು. ಕೊಳವೆಬಾವಿ ಸೇರಿದಂತೆ ಇತರೆ ಪರ್ಯಾಯ ವ್ಯವಸ್ಥೆಗಳ ಮೂಲಕ ಕುಡಿಯುವ ನೀರು ಪೂರೈಸಬೇಕು. ಮಳೆ ಬರದಿದ್ದರೆ ಸಮಸ್ಯೆ ಮತ್ತಷ್ಟು ಹೆಚ್ಚಾಗಲಿದೆ. ಜಾನುವಾರುಗಳಿಗೆ ಗೋಶಾಲೆ ತೆರೆಯಬೇಕಾಗುತ್ತದೆ. ಇದಕ್ಕಾಗಿ ಕ್ರಮ ವಹಿಸುವಂತೆ ಸಚಿವರು ನಿರ್ದೇಶನ ನೀಡಿದರು.
ಬಹುಗ್ರಾಮ ಕುಡಿಯುವ ನೀರಿನ ಯೋಜನೆ, ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಹೊರತುಪಡಿಸಿ ಉಳಿದಂತೆ ನೀರು ಸರಬರಾಜು ಮಾಡಲು ಎಲ್ಲಾ ವ್ಯವಸ್ಥೆಗಳನ್ನು ಕೈಗೊಳ್ಳಬೇಕು. ಅಭಾವ ಪೀಡಿತ ಸ್ಥಳಗಳಿಗೆ ಅಧಿಕಾರಿಗಳು ಖುದ್ದು ಭೇಟಿ ನೀಡಿ ವಾಸ್ತವ ಪರಿಸ್ಥಿತಿಯ ಮಾಹಿತಿ ನೀಡಬೇಕು. ನೀವು ಯಾವುದೇ ಪೂರ್ಣ ಹಾಗೂ ನಿಖರ ಮಾಹಿತಿ ನೀಡದೇ ಹೋದರೆ ಸಮಸ್ಯೆ ಪರಿಹಾರವಾಗುವುದಿಲ್ಲ. ಹೀಗಾಗಿ ಪರಿಸ್ಥಿತಿಯನ್ನು ಅರಿತು ಗಂಭೀರತೆಯಿಂದ ಕರ್ತವ್ಯ ನಿರ್ವಹಿಸಿ ಎಂದು ಸಚಿವರು ತಾಕೀತು ಮಾಡಿದರು.
ಈಗಾಗಲೇ ಕೈಗೆತ್ತಿಕೊಂಡಿರುವ ಕುಡಿಯುವ ನೀರಿನ ಯೋಜನೆಗಳನ್ನು ಪರಿಶೀಲಿಸಬೇಕು. ಕೆಲವೆಡೆಡ ಪೈಪ್ ಲೈನ್ ಗಳನ್ನು ಅವೈಜ್ಞಾನಿಕವಾಗಿ ಅಳವಡಿಸಲಾಗಿದೆ. ಕಾರ್ಯ ಚಟುವಟಿಕೆಗಳು ಹೇಗೆ ನಡೆಯುತ್ತಿದೆ ಎಂಬುದನ್ನು ಖುದ್ದು ವೀಕ್ಷಣೆ ಮಾಡಬೇಕು. ಕೆಲವೆಡೆ ಕಾಮಗಾರಿ ನಿಂತು ಹೋಗಿದೆ. ಈ ಎಲ್ಲವನ್ನು ನೋಡಿ ನೈಜ ಚಿತ್ರಣ ವರದಿಯನ್ನು ಅಧಿಕಾರಿಗಳು ನೀಡಬೇಕು. ಇದರಿಂದ ಸಮಸ್ಯೆ ಪರಿಹಾರ ಸಾಧ್ಯವಾಗಲಿದೆ ಎಂದರು.
ಜಿಲ್ಲೆಯ ಎಲ್ಲಾ ತಾಲೂಕುಗಳಿಗೆ ಭೇಟಿ ನೀಡಿ ಅಭಾವ ಪರಿಸ್ಥಿಯನ್ನು ಖುದ್ದು ತಿಳಿಯಲಿದ್ದೇನೆ. ಆಯಾ ತಾಲೂಕಿನಲ್ಲಿ ಶಾಸಕರು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿ ವಾಸ್ತವ ಅರಿಯಲಾಗುವುದು. ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಕಡ್ಡಾಯವಾಗಿ ಸಭೆಯಲ್ಲಿ ಭಾಗವಹಿಸಿ ಸಂಪೂರ್ಣ ಮಾಹಿತಿ ನೀಡಬೇಕು. ಬೆಳೆ, ಕುಡಿಯುವ ನೀರು, ಮೇವು ಇನ್ನಿತರ ಅಭಾವ ಪೀಡಿತ ಪ್ರದೇಶಗಳ ಸಂಪೂರ್ಣ ವಿವರವನ್ನು ಮೊದಲೇ ತಿಳಿದು ಒದಗಿಸಬೇಕು ಎಂದು ಸಚಿವರು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.
ಅಧಿಕಾರಿಗಳು ಪ್ರಾಮಾಣಿಕವಾಗಿ ಕೆಲಸ ಮಾಡಬೇಕು. ಅಧಿಕಾರಿಗಳು, ಚುನಾಯಿತ ಪ್ರತಿನಿಧಿಗಳು ಒಟ್ಟಾಗಿ ಕೆಲಸ ಮಾಡಿದರೆ ಜನರ ಬವಣೆ ನೀಗಲಿದೆ. ಅಭಿವೃದ್ದಿ ಕಾರ್ಯಗಳು ಸಾಗಲಿವೆ. ಈ ನಿಟ್ಟಿನಲ್ಲಿ ಯಾವುದೇ ಲೋಪಗಳಿಗೆ ಅವಕಾಶವಾಗಬಾರದು. ಶಿಷ್ಟಾಚಾರ ಪಾಲನೆ ಮಾಡಬೇಕು. ಯಾವುದನ್ನೂ ಹಗುರವಾಗಿ ಪರಿಗಣಿಸದೆ ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು. ಪ್ರಸ್ತುತ ತಲೆದೋರಿರುವ ಕುಡಿಯುವ ನೀರು ಉಂಟಾಗಬಹುದಾದ ಮೇವಿನ ಕೊರತೆಯನ್ನು ಪರಿಹರಿಸಲು ಅಧಿಕಾರಿಗಳು ಕೂಡಲೇ ಕಾರ್ಯೋನ್ಮುಖರಾಗಬೇಕೆಂದು ಬರ ಪರಿಸ್ಥಿತಿ, ಅತಿವೃಷ್ಠಿ ನಿರ್ವಹಣೆ ಕುರಿತ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಅವರು ಸೂಚಿಸಿದರು.
ಶಾಸಕರಾದ ಹೆಚ್.ಎಂ. ಗಣೇಶ್ ಪ್ರಸಾದ್ ಅವರು ಮಾತನಾಡಿ ಕ್ಷೇತ್ರದಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡು ಬರುತ್ತಿದ್ದು, ಇದನ್ನು ಮುಂಜಾಗ್ರತಾ ಕ್ರಮದಿಂದ ಸಮರ್ಥವಾಗಿ ಎದುರಿಸಲು ಸಿದ್ದತೆ ಮಾಡಿಕೊಂಡರೆ ಯಾವುದೇ ತೊಂದರೆ ಕಂಡುಬರುವುದಿಲ್ಲ. ಹೀಗಾಗಿ ಅಧಿಕಾರಿಗಳು ಹೆಚ್ಚು ಜಾಗರೂಕರಾಗಿರಬೇಕು ಎಂದರು.
ಕಾಡಾ ಅಧ್ಯಕ್ಷರಾದ ಪಿ. ಮರಿಸ್ವಾಮಿ ಅವರು ಮಾತನಾಡಿ ಪ್ರಸ್ತುತ ಇರುವ ಕುಡಿಯುವ ನೀರಿನ ಸಮಸ್ಯೆಗಳಿಗೆ ಪರಿಹಾರ ಕಂಡು ಕೊಳ್ಳಬೇಕಿದೆ. ಕೆರೆಗಳಿಗೆ ನೀರು ತುಂಬಿಸುವ ಕಾರ್ಯದಿಂದ ಅಂತರ್ಜಲ ಹೆಚ್ಚಳವಾಗಿ ಕುಡಿಯುವ ನೀರಿನ ತೊಂದರೆ ಕಡಿಮೆಯಾಗಲಿದೆ. ಇಂತಹ ಪ್ರಮುಖ ಕೆಲಸಗಳಿಗೆ ಹೆಚ್ಚು ಒತ್ತು ನೀಡಿ ಎಂದರು.
ಜಿಲ್ಲಾಧಿಕಾರಿ ಶ್ರೀರೂಪ ಅವರು ಮಾತನಾಡಿ ಚಾಮರಾಜನಗರ ತಾಲೂಕಿನಲ್ಲಿ ಮುಂಬರುವ ತಿಂಗಳಲ್ಲಿ 26 ಗ್ರಾಮ ಪಂಚಾಯಿತಿಗಳ 42 ಗ್ರಾಮಗಳಲ್ಲಿ ಕುಡಿಯುವ ನೀರಿನ ಮಸ್ಯೆ ಉಂಟಾಗುವ ಸಾಧ್ಯತೆ ಇದೆ ಎಂದು ಗುರುತಿಸಲಾಗಿದ್ದು, 42 ಗ್ರಾಮಗಳಲ್ಲಿ ಖಾಸಗಿ ಬೋರ್ ವೆಲ್ ಗಳನ್ನು ಗುರುತಿಸಲಾಗಿದೆ. ಗುಂಡ್ಲುಪೇಟೆ ತಾಲೂಕಿನಲ್ಲಿ ಮುಂಬರುವ ಅವಧಿಯಲ್ಲಿ 6 ಗ್ರಾಮ ಪಂಚಾಯಿತಿಗಳ 7 ಗ್ರಾಮಗಳು ಕುಡಿಯುವ ನೀರಿನ ಸಮಸ್ಯೆಗೆ ಒಳಗಾಗುವ ಸಾಧ್ಯತೆಯಿದ್ದು, 61 ಗ್ರಾಮಗಳಲ್ಲಿ ಖಾಸಗಿ ಬೋರ್ ವೆಲ್ ಗಳನ್ನು ಗುರುತಿಸಲಾಗಿದೆ. ಯಳಂದೂರು ತಾಲೂಕಿನಲ್ಲಿ ಮುಂಬರುವ ದಿನಗಳಲ್ಲಿ 7 ಗ್ರಾಮ ಪಂಚಾಯಿತಿಗಳ 9 ಗ್ರಾಮಗಳಲ್ಲಿ ಸಮಸ್ಯೆ ಉಂಟಾಗುವ ಸಾಧ್ಯತೆಯಿದ್ದು ಈಗಾಗಲೇ 8 ಗ್ರಾಮಗಳಲ್ಲಿ ಖಾಸಗಿ ಕೊಳವೆಬಾವಿಗಳನ್ನು ಗುರುತಿಸಿ ತುರ್ತು ಪರಿಸ್ಥಿಗೆ ಸಿದ್ದತೆ ಕೈಗೊಳ್ಳಲಾಗಿದೆ ಎಂದರು.
ಕೊಳ್ಳೇಗಾಲ ತಾಲೂಕಿನಲ್ಲಿ ಪ್ರಸ್ತುತ ಹಾಗೂ ಮುಂಬರುವ ಅವಧಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ನಿರೀಕ್ಷಿಸಲಾಗಿಲ್ಲ. ಹನೂರು ತಾಲೂಕಿನಲ್ಲಿ ಹೆಚ್ಚಿನ ಕುಡಿಯುವ ನೀರಿನ ಸಮಸ್ಯೆ ಕಂಡು ಬಂದಿದು ಪ್ರಸ್ತುತ 16 ಗ್ರಾಮ ಪಂಚಾಯಿತಿಗಳ 54 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ. 9 ಗ್ರಾಮಗಳಿಗೆ ಖಾಸಗಿ ಬೋರ್ ವೆಲ್ ಮೂಲಕ 43 ಗ್ರಾಮಗಳಿಗೆ ಟ್ಯಾಂಕರ್ ಮೂಲಕ, 2 ಗ್ರಾಮಗಳಿಗೆ ತೆರೆದಬಾವಿ, ಕೈಪಂಪ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಮುಂಬರುವ ದಿನಗಳಲ್ಲಿ ಹೆಚ್ಚುವರಿಯಾಗಿ 44 ಗ್ರಾಮ ಪಂಚಾಯಿತಿಗಳ 84 ಗ್ರಾಮಗಳು ಸಮಸ್ಯೆಗೆ ಒಳಗಾಗುವ ಸಾಧ್ಯತೆಯಿದ್ದು, ತುರ್ತು ಪರಿಸ್ಥಿಗೆ 26 ಖಾಸಗಿ ಬೋರ್ ವೆಲ್ ಗಳನ್ನು ಗುರುತಿಸಲಾಗಿದೆ. ಟ್ಯಾಂಕರ್ ವ್ಯವಸ್ಥೆಯನ್ನು ಸಜ್ಜುಗೊಳಸಿಲಾಗಿದೆ ಎಂದು ಜಿಲ್ಲಾಧಿಕಾರಿ ಶ್ರೀರೂಪ ಅವರು ವಿವರಿಸಿದರು.
ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್.ವಿ. ಚಂದ್ರು, ಚೂಡಾ ಅಧ್ಯಕ್ಷರಾದ ಮಹಮ್ಮದ್ ಅಸ್ಗರ್ ಮುನ್ನಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ, ಉಪವಿಭಾಗಾಧಿಕಾರಿ ದಿನೇಶ್ ಕುಮಾರ್ ಮೀನಾ, ತಹಶೀಲ್ದಾರರು, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿರಿದ್ದರು.
Like this:
Like Loading...
Related