ಬಾಲಕಾರ್ಮಿಕ ಪದ್ಧತಿ ಸಂಪೂರ್ಣ ನಿರ್ಮೂಲನೆಗೆ ವ್ಯಾಪಕ ಜಾಗೃತಿ ಅಗತ್ಯ : ಜಿಲ್ಲಾಧಿಕಾರಿ ಶ್ರೀರೂಪ

ಚಾಮರಾಜನಗರ: ಬಾಲಕಾರ್ಮಿಕ ಪದ್ಧತಿ ಸಂಪೂರ್ಣ ನಿರ್ಮೂಲನೆಗಾಗಿ ಮಕ್ಕಳ ಪೋಷಕರು ಹಾಗೂ ಮಕ್ಕಳನ್ನು ದುಡಿಸಿಕೊಳ್ಳುವ ಮಾಲೀಕರಿಗೆ ವ್ಯಾಪಕ ಜಾಗೃತಿ ಮೂಡಿಸಬೇಕಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ಅಧ್ಯಕ್ಷರು ಆಗಿರುವ ಶ್ರೀರೂಪ ಅವರು ತಿಳಿಸಿದರು.

   ನಗರದ ವರನಟ ಡಾ. ರಾಜ್ ಕುಮಾರ್ ಜಿಲ್ಲಾ ರಂಗಮಂದಿರದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಾರ್ಮಿಕ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಆಯೋಜಿಸಲಾಗಿದ್ದ ‘ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ’ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಪ್ರತಿಜ್ಞಾವಿಧಿ ಬೋಧಿಸಿ ಅವರು ಮಾತನಾಡಿದರು. 

   ಪ್ರತಿವರ್ಷದಂತೆ ಈ ಬಾರಿಯೂ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನವನ್ನು ವಿಶ್ವಾದ್ಯಂತ ಆಚರಿಸುವ ಮೂಲಕ ಸಾಮಾಜಿಕ ಪಿಡುಗಾಗಿ ಪರಿಣಮಿಸಿರುವ ಬಾಲಕಾರ್ಮಿಕ ಪದ್ದತಿ ವಿರುದ್ಧ ಮಕ್ಕಳಿಗೆ, ಸಾರ್ವಜನಿಕರಿಗೆ ವ್ಯಾಪಕ ಅರಿವು ಮೂಡಿಸಲಾಗುತ್ತಿದೆ. ಮಕ್ಕಳನ್ನು ಬಲವಂತವಾಗಿ ದುಡಿಸಿಕೊಳ್ಳುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು. ಬಾಲಕಾರ್ಮಿಕ ಪದ್ದತಿಯಿಂದ ಮುಕ್ತಗೊಳಿಸಿದ ಮಕ್ಕಳಿಗೆ ಪುನರ್ವಸತಿ ಕಲ್ಪಿಸಬೇಕು. ಶಿಕ್ಷಣ ಮುಂದುವರಿಸಲು ಅವಕಾಶ ಮಾಡಿಕೊಡಬೇಕು. ಈ ಬಗ್ಗೆ ವಿದ್ಯಾರ್ಥಿಗಳಿಗೆ, ಪೋಷಕರಿಗೆ, ಸಾರ್ವಜನಿಕರಿಗೆ ಹೆಚ್ಚಿನ ಜಾಗೃತಿ ಅವಶ್ಯವಾಗಿದೆ ಎಂದರು.

   ಮಕ್ಕಳಿಗೂ ಎಲ್ಲರಂತೆ ಸಮಾನವಾಗಿ ಬದುಕುವ ಹಕ್ಕುಗಳಿವೆ. ಅವುಗಳನ್ನು ಸಂರಕ್ಷಿಸಿ ಉತ್ತಮ ಶಿಕ್ಷಣ ಕೊಡಿಸಲು ತಂದೆತಾಯಿಗಳು ಮುಂದಾಗಬೇಕು. ಪ್ರತಿ ಮಕ್ಕಳ ಶಿಕ್ಷಣಕ್ಕಾಗಿ ಸರ್ಕಾರವು 25 ಸಾವಿರ ವೆಚ್ಚ ಮಾಡುತ್ತಿದೆ. ಅದರ ಸದ್ಭಳಕೆಯಾಗಬೇಕು. ಮಕ್ಕಳಿಗೆ ಶಿಕ್ಷಣದ ಜೊತೆಗೆ ಕಲೆ ಹಾಗೂ ಕ್ರೀಡಾ ಚಟುವಟಿಕೆಗಳಿಗೆ ಉತ್ತೇಜನ ನೀಡಿ ಸಮಾಜದ ಸತ್ಪ್ರಜೆಗಳಾಗಿ ರೂಪಿಸಬೇಕು. ಮಕ್ಕಳ ಸಾಧನೆಗೆ ಪ್ರೋತ್ಸಾಹಿಸಬೇಕು. ಬಾಲಕಾರ್ಮಿಕ ಪದ್ದತಿ ತಡೆಗಟ್ಟಿ ಉತ್ತಮ ಸಮಾಜ ನಿರ್ಮಿಸಲು ಎಲ್ಲರ ಸಹಕಾರ ಅಗತ್ಯವಾಗಿದೆ ಎಂದು ಜಿಲ್ಲಾಧಿಕಾರಿ ಶ್ರೀರೂಪ ಅವರು ತಿಳಿಸಿದರು.  

   ಕಾರ್ಯಕ್ರಮ ಉದ್ಘಾಟಿಸಿದ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಈಶ್ವರ್ ಅವರು ಮಾತನಾಡಿ ಬಾಲಕಾರ್ಮಿಕ ಪದ್ದತಿ ವಿರುದ್ಧ ಅರಿವು ಮೂಡಿಸುವುದೇ ಕಾರ್ಯಕ್ರಮದ ಬಹುಮುಖ್ಯ ಉದ್ದೇಶವಾಗಿದೆ. ಬಾಲಕಾರ್ಮಿಕ ಪದ್ದತಿ ತಡೆಗೆ ಸರ್ಕಾರ 1986ರಲ್ಲಿ ಕಾನೂನು ಜಾರಿಗೊಳಿಸಿದೆ. ಯಾವುದೇ ಉದ್ದಿಮೆಗಳಲ್ಲಿ ಆರ್ಥಿಕ ಉದ್ದೇಶಕ್ಕಾಗಿ ಬಲವಂತವಾಗಿ ದುಡಿಯುವ 1 ರಿಂದ 14 ವರ್ಷದೊಳಗಿನ ಮಕ್ಕಳನ್ನು ಬಾಲಕಾರ್ಮಿಕರು ಹಾಗೂ 14ರಿಂದ 18 ವರ್ಷದೊಳಗಿನ ಮಕ್ಕಳನ್ನು ಕಿಶೋರ ಕಾರ್ಮಿಕರೆಂದು ಗುರುತಿಸಲಾಗಿದೆ. ಬಾಲಕಾರ್ಮಿಕ ಪದ್ದತಿ ತಡೆಗೆ ಎಲ್ಲರೂ ಸಹಕರಿಸಬೇಕು ಎಂದರು. 

   ಕಾನೂನಿನಡಿ ಪುರುಷರು, ಮಹಿಳೆಯರು, ಮಕ್ಕಳು ಹಿರಿಯರು ಸೇರಿದಂತೆ ಎಲ್ಲರೂ ಸಮಾನರಾಗಿದ್ದಾರೆ. ಮಕ್ಕಳಿಗೆ ಬದುಕುವ ಹಕ್ಕು, ಭಾಗವಹಿಸುವ ಹಕ್ಕು, ಶೈಕ್ಷಣಿಕ ಹಾಗೂ ಸಂರಕ್ಷಣೆ ಹಕ್ಕುಗಳಿವೆ. ಮಕ್ಕಳನ್ನು ದುಡಿಮೆಗೆ ಹಚ್ಚದೆ ಶಿಕ್ಷಣ ಕೊಡಿಸಬೇಕು. ದೇಶದ ಸತ್ಪ್ರಜೆಗಳನ್ನಾಗಿ ಮಾಡಬೇಕು. ಉಜ್ವಲ ಭವಿಷ್ಯ ರೂಪಿಸಬೇಕು. ಬಾಲಕಾರ್ಮಿಕ ಪದ್ದತಿ ಮುಕ್ತ ಜಿಲ್ಲೆಗಾಗಿ ಎಲ್ಲರು ಶ್ರಮಿಸಬೇಕು. ಬಾಲಕಾರ್ಮಿಕ ಪದ್ದತಿ ತೊಡೆದುಹಾಕಲು ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ ತಳಮಟ್ಟದ ಅಧಿಕಾರಿಗಳು ಸಕ್ರಿಯರಾಗಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಈಶ್ವರ ಅವರು ಕಿವಿಮಾತು ಹೇಳಿದರು.  

  ಜಿಲ್ಲಾ ಕಾರ್ಮಿಕ ಅಧಿಕಾರಿ ಟಿ.ಸಿ. ರಾಮಚಂದ್ರಯ್ಯ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಬಾಲ ನ್ಯಾಯ ಮಂಡಳಿ ಸದಸ್ಯರಾದ ಎಂ. ಗಂಗಾಧರಸ್ವಾಮಿ ಅವರು ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಕುರಿತು ಮುಖ್ಯ ಭಾಷಣ ಮಾಡಿದರು.                                                                                                                                                                                                                                                

  ಇದೇ ವೇಳೆ ಬಾಲಕಾರ್ಮಿಕ ಪದ್ದತಿಯಿಂದ ಮುಕ್ತಗೊಳಿಸಿದ ಬಾಲಕನಿಗೆ 35 ಸಾವಿರ ರೂ.ಗಳ ಪರಿಹಾರದ ಚೆಕ್ ವಿತರಿಸಲಾಯಿತು. ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಅಂಗವಾಗಿ ಶಾಲಾಮಕ್ಕಳಿಗೆ ಏರ್ಪಡಿಸಲಾಗಿದ್ದ ಚಿತ್ರಕಲೆ, ಪ್ರಬಂಧ ಸ್ಪರ್ಧೆಗಳ ವಿಜೇತರಿಗೆ ಗಣ್ಯರು ಬಹುಮಾನ ಹಾಗೂ ಪ್ರಮಾಣಪತ್ರ ವಿತರಿಸಿದರು. ಇಲಾಖೆಯಲ್ಲಿ ಉತ್ತಮ ಸೇವೆಗೈದ ಹಿರಿಯ ಕಾರ್ಮಿಕ ನಿರೀಕ್ಷಕರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ಅನ್ನ ಚಲನಚಿತ್ರದ ಬಾಲನಟ ಮಾಸ್ಟರ್ ನಂದನ್ ಚಿತ್ರದ ಡೈಲಾಗ್ ಹೇಳಿ ನೆರೆದಿದ್ದವರನ್ನು ರಂಜಿಸಿದರು. 

   ಹೆಚ್ಚುವರಿ ಪೆÇಲೀಸ್ ವರಿμÁ್ಠಧಿಕಾರಿ ಎಂ.ಎನ್. ಶಶಿಧರ್, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಡಿ.ಸಿ. ಶೃತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಾದ ಎಚ್.ಆರ್. ಸುರೇಶ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್. ಚಿದಂಬರಂ, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಪನಿರ್ದೇಶಕರಾದ ಹೆಚ್.ಎನ್. ಪುಟ್ಟಗೌರಮ್ಮ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಬಿ. ಮಂಜುಳ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಾದ ಎಂ. ಲತಾ, ಬಾಲಕಾರ್ಮಿಕ ಸೊಸೈಟಿ ಯೋಜನಾ ನಿರ್ದೇಶಕರಾದ ಎಂ. ಮಹೇಶ್, ಕಾರ್ಮಿಕ ನಿರೀಕ್ಷಕರಾದ ವಿ.ಎಲ್. ಪ್ರಸಾದ್, ನಾರಾಯಣಮೂರ್ತಿ, ಎನ್.ಜಿ.ಒ ನಾರಾಯಣಸ್ವಾಮಿ, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.  

   ವೇದಿಕೆ ಕಾರ್ಯಕ್ರಮಕ್ಕೂ ಮೊದಲು ನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಿಂದ ಜಿಲ್ಲಾಡಳಿತ ಭವನದವರೆಗೆ ಹಮ್ಮಿಕೊಳ್ಳಲಾಗಿದ್ದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ಜಾಥಾಗೆ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಎಂ. ಈಶ್ವರ್ ಹಾಗೂ ಜಿಲ್ಲಾಧಿಕಾರಿಗಳಾದ ಶ್ರೀರೂಪ ಅವರು ಚಾಲನೆ ನೀಡಿದರು. ಜಾಥಾದಲ್ಲಿ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Leave a Reply

Your email address will not be published. Required fields are marked *