ಗ್ರಾಮೀಣ ಪ್ರದೇಶದ ಸಮಸ್ಯೆ ಪರಿಹಾರಕ್ಕೆ ಸಮರ್ಪಕವಾಗಿ ಕಾರ್ಯನಿರ್ವಹಿಸಿ : ಜಿ.ಪಂ. ಸಿಇಒ ಮೋನಾ ರೋತ್ ಸೂಚನೆ

ಚಾಮರಾಜನಗರ: ಗ್ರಾಮಪಂಚಾಯತಿಗಳಲ್ಲಿ ಆಡಳಿತ ಅಧಿಕಾರಿಗಳ ಪಾತ್ರ ಬಹುಮುಖ್ಯವಾಗಿದ್ದು, ಗ್ರಾಮೀಣ ಪ್ರದೇಶದ ಹಲವು ಸಮಸ್ಯೆಗಳನ್ನು ಪರಿಹರಿಸಲು ಸಮರ್ಪಕವಾಗಿ ಕೆಲಸ ನಿರ್ವಹಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಅವರು ಸೂಚಿಸಿದರು. 

ನಗರದ ಜಿಲ್ಲಾ ಪಂಚಾಯತ್ ಕೆ.ಡಿ.ಪಿ ಸಭಾಂಗಣದಲ್ಲಿಂದು ಗ್ರಾಮಪಂಚಾಯತಿ ಚುನಾಯಿತ ಪ್ರತಿನಿಧಿಗಳ ಅಧಿಕಾರ ಅವಧಿಯು ಮುಕ್ತಾಯಗೊಂಡಿರುವ ಹಿನ್ನಲೆಯಲ್ಲಿ ಗ್ರಾಮಪಂಚಾಯತಿಗಳಿಗೆ ನೇಮಕವಾಗಿರುವ ಆಡಳಿತ ಅಧಿಕಾರಿಗಳ ಕಾರ್ಯವ್ಯಾಪ್ತಿ ಅಧಿಕಾರಗಳು ಹಾಗೂ ಕರ್ತವ್ಯಗಳ ಕುರಿತು ಹಮ್ಮಿಕೊಳ್ಳಲಾಗಿದ್ದ ತರಬೇತಿ ಕಾರ್ಯಾಗಾರವನ್ನು ಉದ್ದೇಶಿಸಿ ಅವರು ಮಾತನಾಡಿದರು. 

ಪ್ರಸ್ತುತ ಬೇಸಿಗೆ ಸಮಯದಲ್ಲಿ ಕುಡಿಯುವ ನೀರಿನ ಸಮಸ್ಯೆಗಳು ಬಾರದಂತೆ ಮುಂಜಾಗ್ರತೆ ವಹಿಸಬೇಕು. ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಮುಕ್ತಾಯಗೊಳಿಸಬೇಕು. ವಸತಿ ಯೋಜನೆ, ಸ್ವಚ್ಛ ಭಾರತ್ ಮಿಷನ್, ನರೇಗಾ ಯೋಜನೆ ಸೇರಿದಂತೆ ವಿವಿಧ ಯೋಜನೆಗಳ ಸಮರ್ಪಕ ಅನುμÁ್ಠನಕ್ಕೆ ಕ್ರಮವಹಿಸಬೇಕು. ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಆಡಳಿತಾಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಗ್ರಾಮೀಣಾಭಿವೃದ್ಧಿಗೆ ಪೂರಕವಾಗಿ ಕಾರ್ಯನಿರ್ವಹಿಸಬೇಕು ಎಂದರು.

ಆಡಳಿತಾಧಿಕಾರಿಗಳಿಗೆ ಕಾರ್ಯಕ್ಷಮತೆ ವೃದ್ಧಿಯಾಗುವಲ್ಲಿ ಇಂತಹ ಕಾರ್ಯಾಗಾರಗಳ ಪಾತ್ರ ಮುಖ್ಯವಾಗಿದ್ದು, ಪ್ರಸ್ತುತ ರಾಜ್ಯದಲ್ಲಿಯೇ ಮೊದಲನೆ ಬಾರಿಗೆ ಆಡಳಿತಾಧಿಕಾರಿಗಳಿಗೆ ತರಬೇತಿಯನ್ನು ಜಿಲ್ಲೆಯಲ್ಲಿ ಆಯೋಜಿಸಲಾಗಿದೆ ಎಂದು ಜಿ.ಪಂ ಸಿಇಒ ಮೋನಾ ರೋತ್ ಅವರು ತಿಳಿಸಿದರು.

ಇದೇ ವೇಳೆ ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ತರಬೇತಿ ಸಂಸ್ಥೆಯ ಸಂಪನ್ಮೂಲ ವ್ಯಕ್ತಿಗಳಾದ ಅಬೂಬಕರ್ ಹಾಗೂ ವಿಜಯ್ ಕುಮಾರ್ ಅವರು ಗ್ರಾಮಪಂಚಾಯತಿ ಆಡಳಿತಾಧಿಕಾರಿಗಳಿಗೆ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993 ರಂತೆ ಅವರ ಕರ್ತವ್ಯಗಳು, ಕಾರ್ಯವ್ಯಾಪ್ತಿ ಅಧಿಕಾರಗಳು, ಉದ್ಯೋಗ ಖಾತರಿ ಯೋಜನೆಯಡಿ ನಿರ್ವಹಿಸಬಹುದಾದ ಕರ್ತವ್ಯಗಳ ಕುರಿತು ವಿವರಿಸಿದರು.

ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ಸ್ಥಳೀಯ ಸರ್ಕಾರಗಳಿಗೆ ಪ್ರಾಧಾನ್ಯತೆ ನೀಡಲಾಗಿದ್ದು ಗ್ರಾಮೀಣ ಪ್ರದೇಶದ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಗ್ರಾಮಪಂಚಾಯತಿಗಳು ಸಮರ್ಪಕವಾಗಿ ಕಾರ್ಯನಿರ್ವಹಿಸಬೇಕು. ಕಾರ್ಯಕ್ರಮಗಳ ಅನುμÁ್ಟನದಲ್ಲಿ ವಿಳಂಬ ಧೋರಣೆ ಅನುಸರಿಸದೇ ನಿಗದಿತ ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕು ಎಂದು ಅಬೂಬಕರ್ ಹಾಗೂ ವಿಜಯ್ ಕುಮಾರ್ ಅವರು ತಿಳಿಸಿದರು.

ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಶೃತಿ ಡಿ.ಸಿ, ಮುಖ್ಯಲೆಕ್ಕಾಧಿಕಾರಿ ಬಸವರಾಜು, ಮುಖ್ಯ ಯೋಜನಾಧಿಕಾರಿ ಹೊನ್ನರಾಜು, ಸಹಾಯಕ ಕಾರ್ಯದರ್ಶಿ ಶ್ರೀಕಂಠರಾಜೇ ಅರಸ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *