- ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಬಿ.ಕೆ. ರವಿಕುಮಾರ್
ಚಾಮರಾಜನಗರ: ಯುವಜನರಲ್ಲಿ ಅಡಗಿರುವ ಪ್ರತಿಭೆ, ಆತ್ಮವಿಶ್ವಾಸ ಹಾಗೂ ನಾಯಕತ್ವದ ಗುಣಗಳನ್ನು ಹೊರತರುವಲ್ಲಿ ಯುವಜನೋತ್ಸವದಂತಹ ಕಾರ್ಯಕ್ರಮಗಳು ಸಹಕಾರಿಯಾಗಿದ್ದು, ಇಂತಹ ಕಾರ್ಯಕ್ರಮಗಳಲ್ಲಿ ಯುವಜನತೆ ಹೆಚ್ಚಿನ ಸಂಖ್ಯೆಯಲ್ಲಿ ಉತ್ಸಾಹದಿಂದ ಭಾಗವಹಿಸಬೇಕು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಬಿ.ಕೆ. ರವಿಕುಮಾರ್ ಅವರು ತಿಳಿಸಿದರು.
ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಜಿಲ್ಲಾಮಟ್ಟದ ಯುವಜನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ದೇಶದ ಅಭಿವೃದ್ಧಿಯನ್ನು ಕೇವಲ ಕಟ್ಟಡಗಳು, ಹಣ ಮತ್ತು ಸಂಪತ್ತಿನ ಆಧಾರದ ಮೇಲೆ ಅಳೆಯಲು ಸಾಧ್ಯವಿಲ್ಲ. ಯುವಕರಲ್ಲಿರುವ ಆತ್ಮವಿಶ್ವಾಸ, ನಾಯಕತ್ವದ ಗುಣ, ಕೌಶಲ್ಯ ಮತ್ತು ಸೃಜನಶೀಲತೆಯ ಆಧಾರದ ಮೇಲೆಯೂ ದೇಶದ ಪ್ರಗತಿಯನ್ನು ಅಳೆಯಬೇಕಾಗಿದೆ. ಯುವಜನೋತ್ಸವಗಳು ಯುವಕರ ಆಲೋಚನೆ ಹಾಗೂ ಪ್ರತಿಭೆಗಳಿಗೆ ಸೂಕ್ತ ವೇದಿಕೆ ಒದಗಿಸುತ್ತವೆ ಎಂದು ಅವರು ಅಭಿಪ್ರಾಯಪಟ್ಟರು.
ತಾಲೂಕುಗಳಿಂದ ಯುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಿದೆ. ಯುವಜನರಲ್ಲಿ ಇಂತಹ ಕಾರ್ಯಕ್ರಮಗಳ ಬಗ್ಗೆ ಆಸಕ್ತಿ ಹೆಚ್ಚಿಸುವ ಕೆಲಸವಾಗಬೇಕು. ಸ್ಪರ್ಧೆಗಳಲ್ಲಿ ಗೆಲುವೊಂದೇ ಮುಖ್ಯವಲ್ಲ, ಭಾಗವಹಿಸುವಿಕೆಯೂ ಅμÉ್ಟೀ ಮಹತ್ವದ್ದಾಗಿದೆ. ಸೋಲು ಮುಂದಿನ ಸಾಧನೆಗೆ ಪ್ರೇರಣೆಯಾಗಬೇಕು. ಜಿಲ್ಲಾ ವಿಜೇತರು ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡುವ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಸಲಹೆ ಮಾಡಿದರು.
ಯುವಕರು ಶಿಕ್ಷಣಕ್ಕೂ ಆದ್ಯತೆ ನೀಡಬೇಕು. ದುಶ್ಚಟಗಳಿಂದ ದೂರವಿದ್ದು, ಸಾಮಾಜಿಕ ಜಾಲತಾಣಗಳನ್ನು ತಮ್ಮ ಬೆಳವಣಿಗೆಗೆ ಪೂರಕವಾಗಿ ಬಳಸಿಕೊಳ್ಳಬೇಕು. ಸ್ವಾಮಿ ವಿವೇಕಾನಂದರ 'ಏಳಿ ಎದ್ದೇಳಿ, ಗುರಿ ಮುಟ್ಟುವ ತನಕ ನಿಲ್ಲದಿರಿ' ಎಂಬ ಸಂದೇಶವನ್ನು ಜೀವನದಲ್ಲಿ ಅಳವಡಿಸಿಕೊಂಡು ತಮ್ಮ ಆಸಕ್ತಿಯ ಕ್ಷೇತ್ರಗಳಲ್ಲಿ ಸಾಧನೆ ಮಾಡಬೇಕು ಎಂದು ಅಧ್ಯಕ್ಷರಾದ ಬಿ.ಕೆ. ರವಿಕುಮಾರ್ ಅವರು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಡಾ ಅಧ್ಯಕ್ಷರಾದ ಪಿ. ಮರಿಸ್ವಾಮಿ ಅವರು ಮಾತನಾಡಿ ಹಿಂದಿನ ವರ್ಷಗಳಿಗೆ ಹೋಲಿಸಿದರೆ ಯುವಜನೋತ್ಸವದಲ್ಲಿ ಯುವಜನರ ಭಾಗವಹಿಸುವಿಕೆ ಕಡಿಮೆಯಾಗುತ್ತಿದೆ. ಈ ಹಿಂದೆ 15 ರಿಂದ 20 ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿತ್ತು. ಆದರೆ ಈಗ ಕೇವಲ ಐದು ಸ್ಪರ್ಧೆಗಳಿಗೆ ಸೀಮಿತಗೊಳಿಸಿರುವುದು ಸರಿಯಲ್ಲ. ಯುವಜನತೆಯಲ್ಲಿ ಅಡಗಿರುವ ವಿವಿಧ ಪ್ರತಿಭೆಗಳನ್ನು ಗುರುತಿಸಲು ಹೆಚ್ಚಿನ ಸ್ಪರ್ಧೆಗಳನ್ನು ಆಯೋಜಿಸಬೇಕಿದೆ ಎಂದು ಅಭಿಪ್ರಾಯಪಟ್ಟರು.
ಯುವಕರು ಶಿಕ್ಷಣದ ಜತೆಗೆ ಕ್ರೀಡೆ, ಜಾನಪದ ಕಲೆ, ಸಂಗೀತ, ಸಾಹಿತ್ಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿಯೂ ಆಸಕ್ತಿ ಬೆಳೆಸಿಕೊಳ್ಳಬೇಕು. ಮಹಾ ಸಾಧಕರನ್ನು ಆದರ್ಶವಾಗಿಟ್ಟುಕೊಂಡು ಮುನ್ನಡೆಯಬೇಕು. ಮೊಬೈಲ್ ಗೀಳಿನಿಂದ ದೂರವಿದ್ದು ಗ್ರಂಥಾಲಯಗಳಿಗೆ ತೆರಳಿ ಪುಸ್ತಕಗಳನ್ನು ಓದುವ ಅಭ್ಯಾಸ ಬೆಳೆಸಿಕೊಳ್ಳಬೇಕು. ಸಮಯ ವ್ಯರ್ಥ ಮಾಡದೆ ಜ್ಞಾನಾರ್ಜನೆಗೆ ಆದ್ಯತೆ ನೀಡಬೇಕು ಎಂದು ಪಿ. ಮರಿಸ್ವಾಮಿ ಅವರು ಸಲಹೆ ನೀಡಿದರು.
ಚಾಮರಾಜನಗರ ವಿಶ್ವವಿದ್ಯಾಲಯದ ಜಾನಪದ ವಿಭಾಗದ ಮುಖ್ಯಸ್ಥರಾದ ಡಾ. ಜಗದೀಶ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಶಿವಸ್ವಾಮಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರಾದ ಎ. ರಮೇಶ್, ಚಾಮರಾಜನಗರ ವಿ.ವಿ. ಎನ್ಎಸ್ಎಸ್ ಅಧಿಕಾರಿ ಡಾ. ಆರ್. ಮಹೇಶ್, ಜಾನಪದ ಗಾಯಕರಾದ ಸಿ.ಎಂ. ನರಸಿಂಹಮೂರ್ತಿ, ಹಿರಿಯ ಕ್ರೀಡಾಪಟು ಶ್ರೀನಿವಾಸ ಪ್ರಸಾದ್, ಯುವ ಪ್ರಶಸ್ತಿ ಪುರಸ್ಕøತರಾದ ಜಿ. ಬಂಗಾರು, ಹಿರಿಯ ಕಲಾವಿದ ಮಹದೇವ, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
Related