ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನೂತನ ಕಚೇರಿ ಉದ್ಘಾಟನೆ

ಚಾಮರಾಜನಗರ: ಪಶುಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಅವರು ಜಿಲ್ಲಾಡಳಿತ ಭವನದಲ್ಲಿ ತಮ್ಮ ನೂತನ ಕಚೇರಿಯನ್ನು ಇಂದು ಉದ್ಘಾಟಿಸಿದರು.

ಜಿಲ್ಲಾಡಳಿತ ಭವನದ ಮೊದಲನೆ ಮಹಡಿಯಲ್ಲಿ ತೆರೆಯಲಾಗಿರುವ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿಗೆ ಚಾಲನೆ ನೀಡಿದರು. ಶಾಸಕರಾದ ಸಿ. ಪುಟ್ಟರಂಗಶೆಟ್ಟಿ, ಎ.ಆರ್. ಕೃಷ್ಣಮೂರ್ತಿ, ಹೆಚ್.ಎಂ. ಗಣೇಶ್ ಪ್ರಸಾದ್ ಅವರು ಈ ಸಂದರ್ಭದಲ್ಲಿದ್ದು ಶುಭ ಹಾರೈಸಿದರು.

ಬಳಿಕ ನೂತನ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಸಾರ್ವಜನಿಕರನ್ನು ಭೇಟಿ ಮಾಡಿ ಅಹವಾಲುಗಳನ್ನು ಆಲಿಸಿದರು. ಇದೇ ವೇಳೆ ವಿವಿಧ ಸಮಸ್ಯೆಗಳನ್ನು ಪರಿಹರಿಸಿಕೊಡುವಂತೆ ಸಾರ್ವಜನಿಕರು ಸಲ್ಲಿಸಿದ ಅರ್ಜಿಗಳನ್ನು ಸಚಿವರು ಸ್ವೀಕರಿಸಿ ಅಧಿಕಾರಿಗಳಿಗೆ ಪರಿಹರಿಸಲು ಸೂಚನೆ ನೀಡಿದರು.

ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಯವರು ಸೆಪ್ಟೆಂಬರ್ 26 ಹಾಗೂ 27ರಂದು ಜಿಲ್ಲೆಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಮಲೆಮಹದೇಶ್ವರ ಬೆಟ್ಟ ಹಾಗೂ ನಗರದಲ್ಲಿ ಪ್ರಗತಿ ಪರಿಶೀಲನಾ ಸಭೆಗೆ ಕೈಗೊಂಡಿರುವ ಸಿದ್ದತೆಗಳನ್ನು ಉಸ್ತುವಾರಿ ಸಚಿವರು ಪರಿಶೀಲಿಸಿದರು.
ಮುಖ್ಯಮಂತ್ರಿಯವರ ಭೇಟಿ ಕಾರ್ಯಕ್ರಮದ ಪ್ರತಿಯೊಂದು ವಿವರ ಪಡೆದ ಉಸ್ತುವಾರಿ ಸಚಿವರು ಅಚ್ಚುಕಟ್ಟಾಗಿ ಎಲ್ಲ ಅಗತ್ಯ ಸಿದ್ದತೆಗಳನ್ನು ಕೈಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ತಿಳಿಸಿದರು.

ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಮುಖ್ಯಮಂತ್ರಿಗಳ ಕಾರ್ಯಕ್ರಮ ಹಿನ್ನೆಲೆಯಲ್ಲಿ ಕೈಗೊಳ್ಳಲಾಗಿರುವ ಸಿದ್ದತೆಗಳ ಬಗ್ಗೆ ವಿವರಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು, ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಉಪವಿಭಾಗಾಧಿಕಾರಿ ಮಹೇಶ್, ಇತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *