ನಗರದಲ್ಲಿ ಅರ್ಥಪೂರ್ಣವಾಗಿ ನಡೆದ ಪೊಲೀಸ್ ಹುತಾತ್ಮರ ದಿನಾಚರಣೆ

ಚಾಮರಾಜನಗರ: ಸಾರ್ವಜನಿಕ ಸೇವೆಯಲ್ಲಿ ಜೀವದ ಹಂಗು ತೊರೆದು ಹೋರಾಡಿ ಮಡಿದ ಪೊಲೀಸರಿಗೆ ಗೌರವ ಸಲ್ಲಿಸುವ ಸಲುವಾಗಿ ನಗರದಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆ ಕಾರ್ಯಕ್ರಮ ಅರ್ಥಪೂರ್ಣವಾಗಿ ನಡೆಯಿತು.

ನಗರದ ಜಿಲ್ಲಾ ಪೊಲೀಸ್ ಕವಾಯಿತು ಮೈದಾನದಲ್ಲಿಂದು ಚಾಮರಾಜನಗರ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಪೊಲೀಸ್ ಹುತಾತ್ಮರ ದಿನಾಚರಣೆಯಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ನಾಗ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಆನಂದ್ ಪ್ರಕಾಶ್ ಮೀನಾ ಅವರು ಪೊಲೀಸರಿಂದ ಗೌರವ ವಂದನೆ ಸ್ವೀಕರಿಸಿ ಬಳಿಕ ಹುತಾತ್ಮ ಪೊಲೀಸ್ ಸ್ಮಾರಕಕ್ಕೆ ಹೂಗುಚ್ಚವಿರಿಸಿ ಗೌರವ ಸಲ್ಲಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು ಅವರು ಪ್ರಾಸ್ತವಿಕವಾಗಿ ಮಾತನಾಡಿ ದೇಶದ ಭಾರತದ ಗಡಿ ಪ್ರದೇಶ ಲಡಾಕ್ ಹಾಟ್ ಸ್ಪ್ರಿಂಗ್ ಆಕ್ಸಾಯ್‍ನಲ್ಲಿ 1959ರ ಅಕ್ಟೋಬರ್ 21ರಂದು ಸಿಆರ್‍ಪಿಎಫ್ ಪಡೆಯ ಪೊಲೀಸರು ಗಡಿ ಪಹರೆಯಲ್ಲಿ ಕರ್ತವ್ಯದಲ್ಲಿರುವ ಸಂದರ್ಭದಲ್ಲಿ ಚೀನಾ ಪಡೆಯು ಹೊಂಚು ಹಾಕಿ ದಾಳಿ ನಡೆಸಿತು. ಭಾರತೀಯ ವೀರ ಪೊಲೀಸರು ಎದೆಗುಂದದೆ ಜೀವದ ಹಂಗು ತೊರೆದು ಧೈರ್ಯ ಮತ್ತು ಸಾಹಸದಿಂದ ಹೋರಾಡಿ 10 ಜನ ಪೊಲೀಸರು ಮರಣ ಹೊಂದಿ 9 ಜನ ಪೊಲೀಸರು ಗಾಯಗೊಂಡು ಸೆರೆಯಾದರು. ಇದನ್ನು ಸ್ಮರಿಸುವ ಸಲುವಾಗಿ ದೇಶಾದ್ಯಂತ ಇಂದು ಪೊಲೀಸ್ ಹುತಾತ್ಮರ ದಿನಾಚರಣೆ ಆಚರಿಸಲಾಗುತ್ತಿದೆ ಎಂದರು.

ಸಾರ್ವಜನಿಕರ ಸೇವೆಯಲ್ಲಿದ್ದ ಸಂದರ್ಭದಲ್ಲಿ ಹುತಾತ್ಮರಾಗಿದ್ದು, ರಾಜ್ಯದಲ್ಲಿ 11 ಮಂದಿ ಪೊಲೀಸರು ಹಾಗೂ ಚಾಮರಾಜನಗರ ಜಿಲ್ಲೆಯಲ್ಲೂ ಸಹ ಓರ್ವ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿ ಸೇರಿದಂತೆ ದೇಶಾದ್ಯಂತ ಈ ವರ್ಷ ಒಟ್ಟು 189 ಮಂದಿ ಪೊಲೀಸರು ಮರಣ ಹೊಂದಿದ್ದಾರೆ. ಇವರೆಲ್ಲರನ್ನೂ ನೆನೆಯುವ ಸಲುವಾಗಿ ಪೊಲೀಸ್ ಹುತಾತ್ಮರ ದಿನವನ್ನು ನಗದಲ್ಲಿಯೂ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ಹುತಾತ್ಮ ಪೊಲೀಸರ ಹೆಸರುಗಳನ್ನು ಕಾರ್ಯಕ್ರಮದಲ್ಲಿ ವಾಚಿಸಿದರು.

ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ. ಜಿ. ಸಂತೋಷ್ ಕುಮಾರ್, ಕಾವೇರಿ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಎಂ.ಸಿ. ಸುರೇಂದ್ರ, ಪೊಲೀಸ್ ಅಧಿಕಾರಿಗಳು, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಪೊಲೀಸರೇ ಆಗಲಿ, ಅರಣ್ಯ ಇಲಾಖೆಯೇ ಆಗಿರಲಿ, ಸಾರ್ವಜನಿಕ ಸೇವೆಯಲ್ಲಿ ಇರುವವರು ಹುತಾತ್ಮರಾದ ಸಂದರ್ಭದಲ್ಲಿ ಗೌರವ ಸಲ್ಲಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಪೊಲೀಸರಿಂದ ಗೌರವ ವಂದನೆ ಸ್ವೀಕರಿಸುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ. ದೇಶ, ರಾಜ್ಯ ಹಾಗೂ ಜಿಲ್ಲೆಯ ಸಾರ್ವಜನಿಕ ಸೇವೆಗಾಗಿ ಮಡಿದವರನ್ನು ಸ್ಮರಿಸಬೇಕು. ಹುತಾತ್ಮರ ದಿನ ಆಚರಣೆ ಕಾರ್ಯಕ್ರಮ ಅರ್ಥಪೂರ್ಣವಾಗಿ ಮೂಡಿಬಂದಿದೆ ಎಂದರು.

Leave a Reply

Your email address will not be published. Required fields are marked *