ಪ.ಜಾ, ಪ.ಪಂ ಮೇಲಿನ ದೌರ್ಜನ್ಯ ಪ್ರಕರಣಗಳ ಕಾಯ್ದೆ ಬಗ್ಗೆ ಅರಿವು ಮೂಡಿಸಿ : ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಸೂಚನೆ

ಚಾಮರಾಜನಗರ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೇಲಿನ ದೌರ್ಜನ್ಯ ಪ್ರತಿಬಂಧ ಕಾಯ್ದೆಗಳ ಬಗ್ಗೆ ಅರಿವು ಮೂಡಿಸಲು ವ್ಯಾಪಕವಾಗಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಸೂಚಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮೇಲಿನ ದೌರ್ಜನ್ಯ ಪ್ರಕರಣಗಳ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮೇಲಿನ ದೌರ್ಜನ್ಯ ಪ್ರತಿಬಂಧ ಕಾಯ್ದೆಯಡಿ ದಾಖಲಾಗುವ ಪ್ರಕರಣಗಳಲ್ಲಿ ಶಿಕ್ಷೆಯಾಗುವ ಪ್ರಕರಣಗಳು ಇಳಿಮುಖವಾಗುತ್ತಿರುವ ಬಗ್ಗೆ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಸದಸ್ಯರು ಪ್ರಸ್ತಾಪಿಸಿದರು. ಇದಕ್ಕೆ ಸಂಬಂಧಿಸಿದಂತೆ ಪ್ರತಿಯಿಸಿದ ಜಿಲ್ಲಾಧಿಕಾರಿಯವರು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮೇಲೆ ದೌರ್ಜನ್ಯ ಎಸಗುವುದರಿಂದ ಆಗುವ ಶಿಕ್ಷೆಯ ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಬೇಕು. ಇದಕ್ಕಾಗಿ ಸಮಾಜ ಕಲ್ಯಾಣ ಇಲಾಖೆ ಹೆಚ್ಚು ಅರಿವು ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದರು.

ದೌರ್ಜನ್ಯ ಪ್ರಕರಣಗಳಲ್ಲಿ ಸಂತ್ರಸ್ತರಿಗೆ ಸೂಕ್ತ ನ್ಯಾಯ ಲಭಿಸಬೇಕು. ಅಪರಾಧಿಗಳಿಗೆ ಶಿಕ್ಷೆಯ ಪ್ರಮಾಣ ಹೆಚ್ಚಳವಾಗುವ ನಿಟ್ಟಿನಲ್ಲಿ ಪೂರಕ ಕ್ರಮಗಳಿಗೆ ಪ್ರತ್ಯೇಕ ಸಭೆ ಕರೆಯಬೇಕು. ವಿವರವಾಗಿ ಚರ್ಚಿಸಿ ಮುಂದಿನ ಪ್ರಕ್ರಿಯೆಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿಯವರು ತಿಳಿಸಿದರು.

ಸುಳ್ವಾಡಿ ಪ್ರಕರಣ ಸಂತ್ರಸ್ತರಿಗೆ ನಿವೇಶನ ಹಂಚಿಕೆ ಮಾಡುವ ಕಾರ್ಯ ತ್ವರಿತವಾಗಿ ಆಗಬೇಕು. ಎಂ.ಜಿ. ದೊಡ್ಡಿ ಗ್ರಾಮದ ಸಂತ್ರಸ್ತರಿಗೆ ಆಶ್ರಯ ಯೋಜನೆಯ ಜಮೀನಿನಲ್ಲಿ ನಿವೇಶನ ನೀಡುವ ಸಂಬಂಧ ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಅಧಿಕಾರಿಗಳು ಕ್ರಮವಹಿಸಿ ನಿವೇಶನ ಕಲ್ಪಿಸಿಕೊಡಬೇಕು ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಸೂಚಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು ಅವರು ಮಾತನಾಡಿ ದೌರ್ಜನ್ಯ ಪ್ರಕರಣಗಳನ್ನು ದಾಖಲು ಮಾಡಿಕೊಂಡು ಆದ್ಯ ಗಮನ ನೀಡಲಾಗುತ್ತಿದೆ. ನಿಯಮಾನುಸಾರ ಪ್ರಕರಣಗಳ ಸಂಬಂಧ ಇಲಾಖಾ ವತಿಯಿಂದ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.
ಇದೇ ವೇಳೆ 2023ನೇ ಸಾಲಿನಲ್ಲಿ ದಾಖಲಾದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ದೌರ್ಜನ್ಯ ಪ್ರಕರಣಗಳಲ್ಲಿ ನೀಡಲಾದ ಪರಿಹಾರ ಇನ್ನಿತರ ವಿವರಗಳನ್ನು ಪರಿಶೀಲಿಸಲಾಯಿತು.

ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರಾದ ಸೋಮೇಶ್ವರ, ಆಸೀಫ್‍ವುಲ್ಲಾ, ಸಿದ್ದರಾಜು, ಮುದ್ದಯ್ಯ ಅವರು ಸಭೆಯಲ್ಲಿ ಭಾಗವಹಿಸಿ ದೌರ್ಜನ್ಯ ಪ್ರಕರಣಗಳು ಹಾಗೂ ಸಮುದಾಯದ ಸಮಸ್ಯೆಗಳ ಬಗ್ಗೆ ವಿವರಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಆನಂದ್ ಪ್ರಕಾಶ್ ಮೀನಾ, ಸಹಾಯಕ ಕಾರ್ಯದರ್ಶಿ ಶ್ರೀಕಂಠರಾಜೇ ಅರಸ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಮಲ್ಲಿಕಾರ್ಜುನ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕರಾದ ಗೀತಾ ಲಕ್ಷ್ಮಿ, ತಾಲೂಕು ಸಮಾಜ ಕಲ್ಯಾಣ ಅಧಿಕಾರಿಗಳು, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *